ಹೊಸದಿಗಂತ ಡಿಜಿಟಲ್ ಡೆಸ್ಕ್:
ಕನ್ನಡ ಹೋರಾಟಗಳ ಮೂಲಕ ವರ್ಷಗಳ ಕಾಲ ಗುರುತಿಸಿಕೊಂಡಿರುವ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡುವ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ವಿಧಾನ ಪರಿಷತ್‌ನಲ್ಲಿ ನಡೆದ ಚರ್ಚೆಯ ವೇಳೆ ಈ ವಿಚಾರ ಹೊರಬಂದಿದ್ದು, ಕನ್ನಡಪರ ಹೋರಾಟಗಾರರಿಗೆ ಗೌರವ ನೀಡುವ ಬಗ್ಗೆ ಸರ್ಕಾರದ ನಿಲುವು ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.
ವಿಧಾನ ಪರಿಷತ್‌ನ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಮೇಶ್ ಬಾಬು ಈ ವಿಷಯವನ್ನು ಪ್ರಸ್ತಾಪಿಸಿದರು. ಕನ್ನಡ ನಾಡು, ನೆಲ ಹಾಗೂ ಜಲದ ವಿಚಾರದಲ್ಲಿ ಹೋರಾಟ ನಡೆಸಿದ ಕಾರ್ಯಕರ್ತರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಬೇಕು ಎಂದು ಅವರು ಮನವಿ ಮಾಡಿದರು. ಜೊತೆಗೆ ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡ ಪರ ಹೋರಾಟಗಾರರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದರು.
ಇದನ್ನೂ ಓದಿ:
ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಶಿವರಾಜ್ ತಂಗಡಗಿ, ಕನ್ನಡ ಪರ ಹೋರಾಟಗಾರರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವ ಕಾರ್ಯವನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು. ಈ ವರ್ಷ ಆಯ್ಕೆ ಸಮಿತಿಗೆ ವಾಟಾಳ್ ನಾಗರಾಜ್ ಅವರ ಹೆಸರನ್ನು ಶಿಫಾರಸು ಮಾಡುವುದಾಗಿ ತಿಳಿಸಿದರು.
ಅದೇ ವೇಳೆ ಕನ್ನಡಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದೂ ಅವರು ಹೇಳಿದರು. ಕನ್ನಡ ಪರ ಸಂಘಟನೆಗಳಿಗೆ ನಿವೇಶನ ನೀಡುವ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.



