March 13, 2026
Friday, March 13, 2026
spot_img

ತಂಬಾಕು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರಕಾರ: ಸೋಮವಾರದಿಂದಲೇ ಖರೀದಿಗೆ ಸಿಕ್ಕಿತು ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ನೆರವಿಗೆ ಕೇಂದ್ರ ಸರಕಾರ ಧಾವಿಸಿದ್ದು, ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಇಂದು ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವ ಪಿಯೂಷ್ ಗೋಯಲ್ ಅವರ ಜತೆ ಮಾತುಕತೆ ನಡೆಸಿದರು.

ಈ ವೇಳೆ ತಂಬಾಕು ಬೆಳೆಗಾರರ ಸಮಸ್ಯೆಗಳನ್ನು ಆಲಿಸಿದ ಗೋಯಲ್, ಕೂಡಲೇ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾದರು.

ಈ ಕುರಿತು ಮಾಹಿತಿ ನೀಡಿದ ಕುಮಾರಸ್ವಾಮಿ, ಸೋಮವಾರದಿಂದಲೇ ತಂಬಾಕು ಖರೀದಿ ಮಾಡುವುದು, ವಿದೇಶಿ ಮಾರುಕಟ್ಟೆಗಳಿಗೆ ರಫ್ತು, ಹೊಸ ವಿದೇಶಿ ಮಾರುಕಟ್ಟೆಗಳ ಅನ್ವೇಷಣೆ ಸೇರಿದಂತೆ ಬೆಳೆಗಾರರ ಹಲವಾರು ಪ್ರಮುಖ ಮನವಿಗಳಿಗೆ ಗೋಯಲ್ ಅವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದರು.

ಈ ಸಂದರ್ಭ ಸೃಷ್ಟಿಯಾಗಿರುವ ಬಿಕ್ಕಟ್ಟಿನ ಶಮನಕ್ಕೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ತಂಬಾಕು ಖರೀದಿಸುವ ಉದ್ಯಮದ ಪ್ರಮುಖರ ಜತೆ ಮಾತನಾಡಿ ಬೆಳೆಗಾರರ ನೆರವಿಗೆ ಧಾವಿಸಿ ಬರುವಂತೆ ಸೂಚಿಸಿದರು ಎಂದು ತಿಳಿಸಿದರು.

ಸಭೆ ನಂತರ ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಮಾಜಿ ಸಚಿವ ಸಾ.ರಾ. ಮಹೇಶ್ ಅವರು; ಸೋಮವಾರದಿಂದ ತಂಬಾಕು ಖರೀದಿಗೆ ಸಚಿವ ಪಿಯೂಷ್ ಗೋಯಲ್ ಅವರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.

ಈ ಸಭೆಯಲ್ಲಿ ಮಾಜಿ ಸಚಿವ ಸಾ.ರಾ.ಮಹೇಶ್, ಮೈಸೂರು-ಕೊಡಗು ಸಂಸದ ಯದುವೀರ್ ಚಾಮರಾಜೇಂದ್ರ ಕೃಷ್ಣದತ್ತ ಒಡೆಯರ್, ಶಾಸಕರಾದ ಎ.ಮಂಜು, ಜಿ.ಡಿ.ಹರೀಶ್ ಗೌಡ, ಸಿ.ಎನ್.ಮಂಜೇಗೌಡ, ಮಾಜಿ ಶಾಸಕರಾದ ಮಹದೇವು, ಅಶ್ವಿನ್ ಕುಮಾರ್, ಜೆಡಿಎಸ್ ಹಿರಿಯ ಮುಖಂಡ ಕೃಷ್ಣನಾಯಕ ಹಾಗೂ ಕೋಲಾರ ಸಂಸದ ಮಲ್ಲೇಶ್ ಬಾಬು ಅವರು ಹಾಗೂ ವಾಣಿಜ್ಯ ಸಚಿವಾಲಯದ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !