March 13, 2026
Friday, March 13, 2026
spot_img

ಸಂಸದೆ ಮಹುವಾ ಮೊಯಿತ್ರಾ ವಿರುದ್ದದ ಹಣಕ್ಕಾಗಿ ಪ್ರಶ್ನೆ ಪ್ರಕರಣ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಶ್ನೆಗಾಗಿ ಹಣ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್​ಶೀಟ್​​ ಸಲ್ಲಿಸಲು ಸಿಬಿಐಗೆ ನೀಡಿದ್ದ ಅನುಮತಿಯನ್ನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್‌ನ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠವು ಈ ಆದೇಶವನ್ನು ಹೊರಡಿಸಿದೆ .

ಹೈಕೋರ್ಟ್ ಆದೇಶದ ವಿರುದ್ಧ ಲೋಕಪಾಲ ಸಲ್ಲಿಸಿದ ಅರ್ಜಿಯನ್ನು ಮುಖ್ಯದ್ವಿಸದಸ್ಯ ಪೀಠವು ವಿಚಾರಣೆ ನಡೆಸಿದ್ದು, ಸಿಬಿಐ, ಬಿಜೆಪಿ ಸಂಸದ ಮತ್ತು ದೂರುದಾರ ನಿಶಿಕಾಂತ್ ದುಬೆ ಅವರಿಗೆ ನೊಟೀಸ್ ಜಾರಿ ಮಾಡಿದೆ. ಹಾಗೆಯೇ ಸದ್ಯಕ್ಕೆ ಮೊಯಿತ್ರಾ ಅವರ ವಿರುದ್ಧದ ವಿಚಾರಣೆಯನ್ನು ಮುಂದುವರಿಸದಂತೆ ನ್ಯಾಯಾಲಯ ಸ್ಪಷ್ಟಪಡಿಸಿದೆ.

2025ರ ಡಿಸೆಂಬರ್‌ 19ರಂದು ಮೊಯಿತ್ರಾ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ ಲೋಕಪಾಲದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ಆದರೆ ಲೋಕಪಾಲ ಕಾಯಿದೆಯ ಸೆಕ್ಷನ್ 20ರ ಅಡಿಯಲ್ಲಿ ತನಿಖಾ ಸಂಸ್ಥೆಗಳಿಗೆ ಅನುಮತಿ ನೀಡುವ ಅಧಿಕಾರದ ಕುರಿತು ಹೈಕೋರ್ಟ್ ನೀಡಿರುವ ವ್ಯಾಖ್ಯಾನವು ಸರಿಯಾಗಿಲ್ಲ ಎಂದೂ ನ್ಯಾಯಪೀಠ ಅಭಿಪ್ರಾಯಿಸಿದೆ.

ಪ್ರಕರಣ ಏನು?

ಮಹುವಾ ಮೊಯಿತ್ರಾ ಅವರು ಸಂಸತ್ತಿನಲ್ಲಿ ಅದಾನಿ ಸಮೂಹ ಮತ್ತು ಪ್ರಧಾನಿ ಮೋದಿಯವರನ್ನು ಗುರಿಯಾಗಿಸಿ ಪ್ರಶ್ನೆಗಳನ್ನು ಕೇಳಲು ದುಬೈ ಮೂಲದ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ ಹಣ ಮತ್ತು ದುಬಾರಿ ಉಡುಗೊರೆಗಳನ್ನು ಪಡೆದಿದ್ದಾರೆ ಎಂಬುದು ಪ್ರಮುಖ ಆರೋಪವಾಗಿದೆ. ಈ ವಿಚಾರದಲ್ಲಿ ಲೋಕಸಭೆಯಿಂದಲೇ ಮಹುವಾ ಅವರನ್ನು ಉಚ್ಚಾಟಿಸಲಾಗಿತ್ತು. ಆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಅದೇ ಕೃಷ್ಣನಗರ ಕ್ಷೇತ್ರದಿಂದ ಭಾರಿ ಮತಗಳ ಅಂತರದಿಂದ ಗೆದ್ದು ಸಂಸತ್ತಿಗೆ ಮರಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !