ಹೊಸದಿಗಂತ ಬೆಳಗಾವಿ:
ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಕಾರೊಂದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬಸ್ಸಿನಲ್ಲಿದ್ದ 11 ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.
KA22 F 2103 ನೋಂದಣಿ ಸಂಖ್ಯೆಯ ಬಸ್ ನಂದಗಡದ ಸರ್ಕಾರಿ ಆಸ್ಪತ್ರೆಯ ಎದುರು ಸಾಗುತ್ತಿದ್ದಾಗ, ಎದುರಿನಿಂದ ಕಾರೊಂದು ಏಕಾಏಕಿ ಅಡ್ಡ ಬಂದಿದೆ. ಕಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ ಬಸ್ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲಿದ್ದ ಮರಕ್ಕೆ ಅಪ್ಪಳಿಸಿದೆ. ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಅಪಘಾತದಲ್ಲಿ ಗಾಯಗೊಂಡವರನ್ನು ಜ್ಯೋತಿ ತಹಶಿಲ್ದಾರ(20), ಶ್ರೇಯಸ್ ಮಾದಾರ(17), ಮೆಹಬೂಬಿ ಸನದಿ(60), ಅನ್ನಪೂರ್ಣ ಹುಡೇದಾರ್(36), ಸುನೀತಾ ಕಡಬಿ(27), ಮಂಜುಳಾ ಹುಡೇದಾರ್(28), ಪವಿತ್ರಾ ಹುಡೇದಾರ್(28), ಶಿವಾನಿ ಅಂಬೇವಾಡ್ಕರ್(37) ಮತ್ತು ಶೀಲಾ ಮಿಟಗಾರ (35) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ತಕ್ಷಣವೇ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಕಾರು ಚಾಲಕನಿಗಾಗಿ ಹುಡುಕಾಟ ನಡೆದಿದೆ.



