ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೀದರ್ ಜಿಲ್ಲೆಯಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಿ, ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಜಾಲವನ್ನು ಬೀದರ್ ಪೊಲೀಸರು ಭೇದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಬರೋಬ್ಬರಿ 105 ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ವಶಪಡಿಸಿಕೊಳ್ಳಲಾದ ಸಿಲಿಂಡರ್‌ಗಳ ಒಟ್ಟು ಮೌಲ್ಯ ಅಂದಾಜು 2.55 ಲಕ್ಷ ರೂಪಾಯಿ ಎಂದು ತಿಳಿದುಬಂದಿದೆ.
ಜನವಾಡ ಗ್ರಾಮದ ಹೊಲವೊಂದರಲ್ಲಿ ಇಂಡಿಯನ್ ಮತ್ತು ಹೆಚ್‌ಪಿ ಗ್ಯಾಸ್ ಏಜೆನ್ಸಿಗಳಿಂದ ಪಡೆದ ಗೃಹಬಳಕೆಯ ಹಾಗೂ ವಾಣಿಜ್ಯ ಸಿಲಿಂಡರ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿಡಲಾಗಿತ್ತು.
ಮಾರುಕಟ್ಟೆಯಲ್ಲಿ ಗ್ಯಾಸ್ ಸಿಲಿಂಡರ್‌ಗಳ ಅಭಾವವನ್ನು ಬಂಡವಾಳ ಮಾಡಿಕೊಂಡಿದ್ದ ದಂಧೆಕೋರರು, 1,000 ರೂ. ಬೆಲೆಯ ಸಿಲಿಂಡರನ್ನು ಸಾರ್ವಜನಿಕರಿಗೆ 2,000 ರೂ. ಗಿಂತಲೂ ಅಧಿಕ ದರಕ್ಕೆ ಮಾರಾಟ ಮಾಡುತ್ತಿದ್ದರು.
ಈ ಅಕ್ರಮ ಜಾಲಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಸಾಮಾನ್ಯ ಜನರ ಅಗತ್ಯಗಳನ್ನು ದುರುಪಯೋಗಪಡಿಸಿಕೊಂಡು ಹಣ ಮಾಡಲು ಹವಣಿಸುತ್ತಿದ್ದ ಏಜೆನ್ಸಿಗಳ ಈ ಕೃತ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.



