July 4, 2026
Saturday, July 4, 2026
spot_img

ರಿಪ್ಪನ್‌ಪೇಟೆಯಲ್ಲಿ ಹೆಜ್ಜೇನು ಅಟ್ಟಹಾಸ: ದಿಕ್ಕಾಪಾಲಾದ ಸಾರ್ವಜನಿಕರು, ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ಹೊಸದಿಗಂತ ಶಿವಮೊಗ್ಗ:

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ಸಾಗರ ರಸ್ತೆಯಲ್ಲಿ ಇಂದು ಹೆಜ್ಜೇನುಗಳು ಏಕಾಏಕಿ ದಾಳಿ ನಡೆಸಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಇಲ್ಲಿನ ಎಸ್‌ಬಿಐ (SBI) ಬ್ಯಾಂಕ್ ಸಮೀಪ ಸಂಭವಿಸಿದ ಈ ಘಟನೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.

ಸಾಗರ ರಸ್ತೆಯ ಎಸ್‌ಬಿಐ ಬ್ಯಾಂಕ್ ಬಳಿ ಇದ್ದ ಜೇನುಗೂಡು ಏಕಾಏಕಿ ಚದುರಿದ್ದು, ರಸ್ತೆಯಲ್ಲಿ ಸಂಚರಿಸುತ್ತಿದ್ದವರ ಮೇಲೆ ದಾಳಿ ಇಟ್ಟಿದೆ. ಈ ವೇಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಹಾಲ್ ಟಿಕೆಟ್ ಪಡೆಯಲು ಶಾಲೆಗೆ ತೆರಳುತ್ತಿದ್ದ ಇಬ್ಬರು ವಿದ್ಯಾರ್ಥಿಗಳು, ಒಬ್ಬ ಸರ್ಕಾರಿ ಶಾಲಾ ವಿದ್ಯಾರ್ಥಿ ಹಾಗೂ ಓರ್ವ ಪದವಿ ವಿದ್ಯಾರ್ಥಿಯ ಮೇಲೆ ಜೇನುಗಳು ದಾಳಿ ಮಾಡಿವೆ. ಅದೃಷ್ಟವಶಾತ್ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದಾಳಿಯ ತೀವ್ರತೆಗೆ ಎಸ್‌ಬಿಐ ಬ್ಯಾಂಕ್ ಉದ್ಯೋಗಿ ತೌಸಿಫ್ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅವರಿಗೆ ಸುಮಾರು 30ಕ್ಕೂ ಹೆಚ್ಚು ಹೆಜ್ಜೇನುಗಳು ಚುಚ್ಚಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆ ಸಂಭವಿಸುತ್ತಿದ್ದಂತೆ ಸ್ಥಳೀಯರು ಧೈರ್ಯದಿಂದ ಮುನ್ನುಗ್ಗಿ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾದರು. ವಿಷಯ ತಿಳಿಯುತ್ತಿದ್ದಂತೆ ಪದವಿ ಕಾಲೇಜಿನ ಉಪನ್ಯಾಸಕರು ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ.

ಕೆಲಕಾಲ ಪಟ್ಟಣದ ಸಾಗರ ರಸ್ತೆಯಲ್ಲಿ ಗೊಂದಲ ಮತ್ತು ಭೀತಿಯ ವಾತಾವರಣ ನಿರ್ಮಾಣವಾಗಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !