January17, 2026
Saturday, January 17, 2026
spot_img

ಹಾಸನ | ಮಕ್ಕಳು ತಂದಿಟ್ಟ ಜಗಳ ತಂದೆಯ ಸಾವಿನಲ್ಲಿ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಾಸನದ ಅರಸೀಕೆರೆಯಲ್ಲಿ ಮಕ್ಕಳ ಗಲಾಟೆ ಎರಡು ಕುಟುಂಬದ ನಡುವೆ ದೊಡ್ಡ ಜಗಳವಾಗಿದ್ದು, ಅಂತಿಮವಾಗಿ ತಂದೆಯ ಕೊಲೆಯಲ್ಲಿ ಅಂತ್ಯಕಂಡಿದೆ.

ಲಾಟೆಯಲ್ಲಿ ಫರಾನ್ ಮಾಡಿದ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ತೌಫಿಕ್ (28) ಸಾವನ್ನಪ್ಪಿದ್ದಾನೆ.ಈ ಘಟನೆಯಿಂದ ತೌಫಿಕ್‌ನ ಕುಟುಂಬಸ್ಥರು ರೊಚ್ಚಿಗೆದ್ದು, ಆರೋಪಿ ಫರಾನ್‌ನ ಮನೆಯ ಮೇಲೆ ದಾಳಿ ನಡೆಸಿ, ಮನೆ ಜಖಂಗೊಳಿಸಿ ಕಾರಿಗೆ ಬೆಂಕಿ ಹಚ್ಚಿದ್ದಾರೆ.

ಪ್ರಕರಣದ ಕುರಿತು ಅರಸೀಕೆರೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವಿಚಾರಣೆ ಮುಂದುವರಿದಿದೆ. ಈ ಘಟನೆಯಿಂದ ಮುಜವಾರ್ ಮೊಹಲ್ಲಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಶಾಂತಿ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಅರಸೀಕೆರೆ ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ತೌಫಿಕ್ ಹಾಗೂ ಫರಾನ್ ಪುತ್ರರು ಆ.25 ರಂದು ಕ್ಷುಲ್ಲಕ ಕಾರಣಕ್ಕೆ ಶಾಲೆಯಲ್ಲಿ ಗಲಾಟೆ ಮಾಡಿಕೊಂಡಿದ್ದರು. ಕಳೆದ ನಾಲ್ಕು ದಿನಗಳ ಹಿಂದೆ ಅರಸೀಕೆರೆಯ ಬಿಹೆಚ್ ರಸ್ತೆಯಲ್ಲಿರುವ ಅಂಗಡಿಯಲ್ಲಿ ಎದುರಾದ ತೌಫಿಕ್ ಹಾಗೂ ಫರಾನ್ ಇದೇ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು. ಜಗಳ ಅತಿರೇಕಕ್ಕೆ ತಿರುಗಿ ಫರಾನ್, ತೌಫಿಕ್‍ನನ್ನು ತಳ್ಳಿದ್ದ. ಈ ವೇಳೆ ಮೇಲಿನಿಂದ ಮೆಟ್ಟಿಲುಗಳ ಮೇಲೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ತೌಫಿಕ್‍ನನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದರು. ತೌಫಿಕ್ ಸಾವಿನಿಂದ ರೊಚ್ಚಿಗೆದ್ದ ಕುಟುಂಬಸ್ಥರು, ರಾತ್ರಿ ಫರಾನ್ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಕಾರಿಗೆ ಬೆಂಕಿ ಹಚ್ಚಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

Must Read

error: Content is protected !!