ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಗಾದಿ ಹಬ್ಬದ ಸಂಭ್ರಮದ ನಡುವೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆಯ ಸಂಭ್ರಮ ಗರಿಗೆದರಿದೆ. ಪ್ರತಿವರ್ಷದಂತೆ ಈ ಬಾರಿಯೂ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆ ಇರುವುದರಿಂದ ಲಡ್ಡು ಪ್ರಸಾದದ ಸಿದ್ಧತೆ ಭರದಿಂದ ಸಾಗುತ್ತಿದೆ.
ಯುಗಾದಿ ದಿನ ದೇವಾಲಯದಲ್ಲಿ ವಿಶೇಷ ಪೂಜೆಗಳು ನಡೆಯಲಿದ್ದು, ದೂರದೂರಿನಿಂದ ಭಕ್ತರು ವಾಹನಗಳಲ್ಲಿಯೂ ಕಾಲ್ನಡಿಗೆಯಲ್ಲಿಯೂ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಭಕ್ತರಿಗೆ ಕೊರತೆ ಆಗದಂತೆ ಈ ಬಾರಿ ಸುಮಾರು 10 ಲಕ್ಷ ಲಡ್ಡುಗಳನ್ನು ತಯಾರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:
ಕಳೆದ ಎರಡು ದಿನಗಳಿಂದ ಸುಮಾರು 50ಕ್ಕೂ ಹೆಚ್ಚು ಬಾಣಸಿಗರು ಲಡ್ಡು ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಇದಕ್ಕಾಗಿ ನೂರಾರು ಕ್ವಿಂಟಲ್ ಕಡಲೆಹಿಟ್ಟು ಮತ್ತು ಸಕ್ಕರೆ, ಸಾವಿರಾರು ಲೀಟರ್ ಅಡುಗೆ ಎಣ್ಣೆ, ಜೊತೆಗೆ ನಂದಿನ ತುಪ್ಪ, ದ್ರಾಕ್ಷಿ ಮತ್ತು ಗೋಡಂಬಿ ಸೇರಿದಂತೆ ಗುಣಮಟ್ಟದ ಸಾಮಗ್ರಿಗಳನ್ನು ಬಳಸಲಾಗುತ್ತಿದೆ.
ಲಡ್ಡುಗಳ ಗುಣಮಟ್ಟ ಕಾಪಾಡಲು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ತಯಾರಿಕಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ, ಯುಗಾದಿ ಹಬ್ಬದ ಸಂದರ್ಭದಲ್ಲಿ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.



