ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಲವು ದಿನಗಳ ಒಣಹವೆಯ ನಂತರ ರಾಜ್ಯದಲ್ಲಿ ಮಳೆ ಚಟುವಟಿಕೆ ಮತ್ತೆ ಚುರುಕುಗೊಂಡಿದೆ. ಇಂದು ಕೆಲವೆಡೆ ಗುಡುಗು-ಸಿಡಿಲು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳ, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಮತ್ತು ಕೋಲಾರ ಜಿಲ್ಲೆಗಳು ಯೆಲ್ಲೋ ಅಲರ್ಟ್ ಪಟ್ಟಿಯಲ್ಲಿವೆ.
ಇದನ್ನೂ ಓದಿ:
ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ಕರಾವಳಿ ಪ್ರದೇಶಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆಯೇ ಮುಂದುವರಿಯಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಹೆಚ್ಚಿನ ಪ್ರಮಾಣದ ಮಳೆ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಎಂದು ಇಲಾಖೆ ತಿಳಿಸಿದೆ.
ಒಟ್ಟಾರೆ, ಕೆಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.



