ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 4 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಹನುಮಂತೇಗೌಡನ ಪಾಳ್ಯದಲ್ಲಿ ಈ ದುರ್ಘಟನೆ ನಡೆದಿದೆ.
ಮೃತ ಬಾಲಕಿಯನ್ನು ನಿಶಿಕಾ (4) ಎಂದು ಗುರುತಿಸಲಾಗಿದೆ.
ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ತಾಯಿ ಒಂದು ಮಗು ಮಡಿಲಲ್ಲಿ ಹಿಡಿದುಕೊಂಡು, ಮತ್ತೊಂದು ಮಗುವಿನ ಕೈ ಹಿಡಿದು ಸಾಗುತ್ತಿದ್ದಾಗ ಎದುರಿಗೆ ಬಂದ ಲಾರಿ ಏಕಾಏಕಿ ಬಾಲಕಿಯ ಮೇಲೆ ಹರಿದಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:
ಘಟನೆಯ ಪರಿಣಾಮ ಬಾಲಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ತಾಯಿಯ ಕಣ್ಣೆದುರೇ ಈ ದುರ್ಘಟನೆ ನಡೆದಿರುವುದು ಮನಕಲುಕುವಂತಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣವನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ.



