ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಬೇಸಿಗೆಯ ಸಂದರ್ಭದಲ್ಲಿ ಕುಡಿಯುವ ನೀರಿನ ಅಭಾವ ಉಂಟಾಗದಂತೆ ತಡೆಯಲು ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡಿದ್ದು, ಜನರ ನೀರಿನ ದಾಹ ತಣಿಸಲು ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಮುಂದಿನ ಮೂರು ತಿಂಗಳುಗಳ ಕಾಲ ಪ್ರತಿ ತಿಂಗಳ 2ನೇ ಹಾಗೂ 4ನೇ ಸೋಮವಾರದಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಕುರಿತ ವಸ್ತುಸ್ಥಿತಿಯ ಬಗ್ಗೆ ಕಡ್ಡಾಯವಾಗಿ ಸಭೆ ನಡೆಸಬೇಕು. ಆಯಾ ಜಿಲ್ಲೆಗಳಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ನಿಖರ ಮಾಹಿತಿ ನೀಡುವಂತೆ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ನಿಯಂತ್ರಣ ಕೊಠಡಿಗಳನ್ನು ತೆರೆಯಲು ಹಾಗೂ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಕ್ಷಿಪ್ರ ಕಾರ್ಯಪಡೆಗಳನ್ನು ರಚಿಸಿ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ಸೂಚಿಸಲಾಗಿದೆ. ಗ್ರಾಮೀಣ ಭಾಗದ ನೀರಿನ ಮೂಲಗಳನ್ನು ನಿರಂತರವಾಗಿ ಪರಿಶೀಲಿಸಬೇಕು ಮತ್ತು ಕೊಳವೆಬಾವಿಗಳ ಸುತ್ತಮುತ್ತ ಯಾವುದೇ ಕಲುಷಿತ ನೀರು ಅಥವಾ ಚರಂಡಿ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಈ ಮೂಲಕ ಸಾಂಕ್ರಾಮಿಕ ರೋಗಗಳು ಹರಡದಂತೆ ಮತ್ತು ಜನರಿಗೆ ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ವಿವರಿಸಿದ್ದಾರೆ.



