ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಸೈಟ್ ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಸೇರಿದಂತೆ ಹಲವು ಮಂದಿಗೆ ಕರ್ನಾಟಕ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ. ಈ ಬೆಳವಣಿಗೆ ಪ್ರಕರಣಕ್ಕೆ ಹೊಸ ತಿರುವು ನೀಡಿದೆ.
ಈ ಹಿಂದೆ ಮುಡಾ ಹಗರಣದ ಕುರಿತು ಲೋಕಾಯುಕ್ತರು ಸಲ್ಲಿಸಿದ್ದ ‘ಬಿ ರಿಪೋರ್ಟ್’ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು. ಅದರೊಂದಿಗೆ ಸಿದ್ದರಾಮಯ್ಯ ಸೇರಿದಂತೆ ಕೆಲ ಆರೋಪಿಗಳನ್ನು ದೋಷಮುಕ್ತಗೊಳಿಸಲಾಗಿತ್ತು. ಆದರೆ ಈ ಆದೇಶವನ್ನು ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.
ಮೇಲ್ಮನವಿಯನ್ನು ಪರಿಗಣಿಸಿದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ, ಪಾರ್ವತಿ, ಲೋಕಾಯುಕ್ತ ಪೊಲೀಸ್ ಇಲಾಖೆ, ಜಾರಿ ನಿರ್ದೇಶನಾಲಯ ಹಾಗೂ ಇತರ ಆರೋಪಿಗಳಾದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರಿಗೆ ನೋಟಿಸ್ ಜಾರಿ ಮಾಡಿ ಪ್ರತಿಕ್ರಿಯೆ ಕೇಳಿದೆ.
ಇದನ್ನೂ ಓದಿ:
ಮುಡಾ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಸಿದ್ದರಾಮಯ್ಯ, ಎರಡನೇ ಆರೋಪಿಯಾಗಿ ಪಾರ್ವತಿ ಸೇರಿದ್ದರು. ಉಳಿದ ಆರೋಪಿಗಳ ವಿರುದ್ಧ ತನಿಖೆ ಮುಂದುವರಿಯುವಂತೆ ವಿಶೇಷ ನ್ಯಾಯಾಲಯ ಈಗಾಗಲೇ ಸೂಚಿಸಿತ್ತು.
ಈ ನಡುವೆ ಹೈಕೋರ್ಟ್ ನೋಟಿಸ್ ಜಾರಿಯಿಂದ ಪ್ರಕರಣ ಮತ್ತೆ ಚರ್ಚೆಗೆ ಬಂದಿದೆ. ಮುಂದಿನ ವಿಚಾರಣೆಯಲ್ಲಿ ಏನೆಲ್ಲ ಬೆಳವಣಿಗೆಗಳು ನಡೆಯುತ್ತವೆ ಎಂಬುದರತ್ತ ರಾಜಕೀಯ ವಲಯದ ಗಮನ ಕೇಂದ್ರೀಕೃತವಾಗಿದೆ.



