ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯವು ತೀವ್ರಗೊಂಡಿದೆ.
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ಘಟಾನುಘಟಿ ನಾಯಕರು ತಮ್ಮ ಅಭ್ಯರ್ಥಿಗಳ ಪರವಾಗಿ ಬಿರುಸಿನ ಮತಯಾಚನೆಯಲ್ಲಿ ತೊಡಗಿದ್ದಾರೆ.
ಬಾಗಲಕೋಟೆಯ ಸುತಗುಂಡಾರ, ನಾಯನೇಗಲಿ ಮತ್ತು ರಾಂಪುರ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಾರಿ ಉಮೇಶ್ ಮೇಟಿ ಅವರನ್ನು ಭಾರಿ ಅಂತರದಿಂದ ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದರು.
ಬಾಗಲಕೋಟೆಗೆ ಮಂಜೂರಾಗಿರುವ ಮೆಡಿಕಲ್ ಕಾಲೇಜು ದಿವಂಗತ ಎಚ್.ವೈ. ಮೇಟಿ ಅವರ ಅವಿರತ ಶ್ರಮದ ಫಲವಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ಸ್ಮರಿಸಿದರು. ಮತ್ತೊಂದೆಡೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ್ ಪರ ಪ್ರಚಾರ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ ಇದ್ದು ಚರಂತಿಮಠ್ ಅವರು ಭರ್ಜರಿ ಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಮುಖ್ಯಮಂತ್ರಿಗಳ ವಿರುದ್ಧ ಕಿಡಿಕಾರಿದ ಅವರು, ಸೋಲಿನ ಭೀತಿಯಿಂದಾಗಿ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ವ್ಯಂಗ್ಯವಾಡಿದರು.



