ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ತೃತೀಯ ಭಾಷೆಯ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸರಾಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಇದರ ಬೆನ್ನಲ್ಲೇ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಲೋಕಭವನಕ್ಕೆ ಮುತ್ತಿಗೆ ಹಾಕಲು ಕರವೇ ನಾರಾಯಣಗೌಡ ಬಣದಿಂದ ನಿರ್ಧರಿಸಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಕರವೇ ಕಾರ್ಯಕರ್ತರು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ನೀವು ಜನರಿಂದ ಆಯ್ಕೆಯಾದ ಪ್ರತಿನಿಧಿಯಲ್ಲ, ಸರ್ಕಾರದ ದೈನಂದಿನ ಆಡಳಿತದಲ್ಲಿ ಮಧ್ಯಪ್ರವೇಶಿಸುವ ನೈತಿಕ ಹಕ್ಕು ನಿಮಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ ನಾರಾಯಣಗೌಡ, ಕರ್ನಾಟಕ ಸರ್ಕಾರಕ್ಕೆ ನೀವು ಬರೆದ ಪತ್ರದ ಕುರಿತ ಮಾಧ್ಯಮ ವರದಿಗಳನ್ನು ಗಮನಿಸಿದೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ನೀವು ಹೇಳಿದ್ದೀರಿ. ನಿಮ್ಮ ಈ ಪತ್ರ, ಈ ಹಸ್ತಕ್ಷೇಪ ಒಕ್ಕೂಟ ವ್ಯವಸ್ಥೆಯನ್ನು ಅಣಕಿಸುವಂತೆ ಇದೆ.
ರಾಜ್ಯಪಾಲರು ಸರ್ಕಾರದ ಪದನಿಮಿತ್ತ ಮುಖ್ಯಸ್ಥರು ಎಂಬುದನ್ನು ನೀವು ಮರೆತಿದ್ದೀರಿ. ನೀವು ನಮ್ಮಿಂದ ನೇರವಾಗಿ ಆಯ್ಕೆಯಾದ ಜನಪ್ರತಿನಿಧಿಯಲ್ಲ. ಒಂದು ಸರ್ಕಾರ ಬಹುಮತದೊಂದಿಗೆ ಸದೃಢವಾಗಿ ಕಾರ್ಯ ನಿರ್ವಹಿಸುತ್ತಿರುವಾಗ ದೈನಂದಿನ ಆಡಳಿತದಲ್ಲಿ ಮೂಗು ತೂರಿಸಲು ನಿಮಗೆ ಯಾವುದೇ ನೈತಿಕ ಅಧಿಕಾರವಿಲ್ಲ, ಸಾಂವಿಧಾನಿಕ ಹೊಣೆಗಾರಿಕೆಯಿಲ್ಲ. ಅದು ನಿಮ್ಮ ವ್ಯಾಪ್ತಿಯ ಕೆಲಸವೂ ಅಲ್ಲ.ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ನೀವು ಬರೆದಿರುವ ಪತ್ರವನ್ನು ಕೂಡಲೇ ಹಿಂದಕ್ಕೆ ಪಡೆಯಿರಿ. ಸರ್ಕಾರ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿದೆ. ದಶಕಗಳಿಂದ ಕನ್ನಡದ ಜನತೆಯನ್ನುಕಾಡುತ್ತಿದ್ದ ಶಾಪ ವಿಮೋಚನೆಯಾಗಿದೆ. ಒಂದು ವೇಳೆ ಇದನ್ನು ಜಾರಿಗೆ ತರುವುದನ್ನು ತಡೆಯಲು ಯಾರೇ ಯತ್ನಿಸಿದರೂ ಕರ್ನಾಟಕದಲ್ಲಿ ಧಗಧಗಿಸುವ ಕ್ರಾಂತಿಯ ಜ್ವಾಲೆ ಹೊತ್ತಿಕೊಳ್ಳಲಿದೆ ಎಂದು ಆಕ್ರೋಶ ಹೊರ ಹಾಕಿದರು.



