April 4, 2026
Saturday, April 4, 2026
spot_img

ಬೆಳಗಾವಿಯನ್ನು ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಪಣತೊಟ್ಟ ಜಿಲ್ಲಾಧಿಕಾರಿ: ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸೂಚನೆ

ಹೊಸ ದಿಗಂತ ವರದಿ, ಬೆಳಗಾವಿ :

ಜಿಲ್ಲೆಯನ್ನು ಕುಷ್ಠ ರೋಗಮುಕ್ತವನ್ನಾಗಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ನಿಯಮಿತ ಪತ್ತೆ ಪರೀಕ್ಷೆಗಳು ಅತ್ಯಗತ್ಯವಾಗಿದೆ. ಕುಷ್ಠ ರೋಗಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಎಲ್ಲ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸೂಚನೆ ನೀಡಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲಸಿಕಾ ಕಾರ್ಯ ಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿಯೂ ಕುಷ್ಠರೋಗ ಪತ್ತೆ ಹಚ್ಚುವ ಕಾರ್ಯವಾಗಬೇಕು. ಗ್ರಾಮ ಪಂಚಾಯತ ಹಾಗೂ ಶಾಲೆಗಳಲ್ಲಿ ಶಿಬಿರಗಳನ್ನು ಆಯೋಜಿಸಲು ಯೋಜನೆ ಸಿದ್ಧತೆ ಮಾಡಿಕೊಳ್ಳಬೇಕು ಎಂದರು. ಜಿಲ್ಲೆಯನ್ನು ಕುಷ್ಠ ರೋಗಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿತ್ತಿರುವ ಅಭಿಯಾನ ಯಶಸ್ವಿಗೊಳಿಸಲು ಆರೋಗ್ಯ ಇಲಾಖೆಯಿಂದ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಬೇಕು.

ಅಭಿಯಾನದ ಯಶಸ್ಸಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಆಶಾ ಕಾರ್ಯಕರ್ತೆಯರ ಮೂಲಕ ಜಿಲ್ಲೆಯ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಪರೀಕ್ಷೆ ನಡೆಸುವಂತೆ ತಿಳಿಸಿದರು. ಜಿಲ್ಲೆಯಲ್ಲಿ ಎಚ್.ಆಯ್.ವಿ. ಸೋಂಕಿತರ ಪತ್ತೆ ಕಾರ್ಯವನ್ನು ಚುರುಕುಗೊಳಿಸಬೇಕು. ಈ ಕಾರ್ಯದಲ್ಲಿ ಸರ್ಕಾರೇತರ ಸಂಸ್ಥೆಗಳು ಇಲಾಖೆಯೊಂದಿಗೆ ಸಹಕರಿಸಲು ಕರೆ ನೀಡಿದರು.ಎಚ್.ಆಯ್.ವಿ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಜಿಲ್ಲೆಯಲ್ಲಿ ಎಚ್.ಆಯ್.ವಿ. ಸೋಂಕಿತರನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆಗೆ ಕ್ರಮವಹಿಸುವುದರ ಜೊತೆಗೆ ಕೌನ್ಸಿಲ್ ಮಾಡಿಸಬೇಕು. ವಿವಿಧ ಇಲಾಖೆಗಳಲ್ಲಿ ಎಚ್.ಆಯ್.ವಿ ಅರಿವು ಮೂಡಿಸುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಸಮಿತಿ ರಚಿಸಿ ಕಾರ್ಯಕ್ರಮ ಆಯೋಜಿಸಬೇಕು. ವಿವಿಧ ವಸತಿ ನಿಲಯಗಳಲ್ಲಿಯೂ ಜಾಗೃತಿ ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆಯ್.ಪಿ. ಗಡಾದ, ಜಿಲ್ಲಾ ಎಡ್ಸ್ ನಿಯಂತ್ರಣಾಧಿಕಾರಿ ಡಾ.ಚಾಂದನಿ ದೇವಡಿ, ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಬಿ ಬಸರಗಿ, ಜಿಲ್ಲಾ ಆರ.ಸಿ.ಎಚ್ ಅಧಿಕಾರಿ ಡಾ.ಎಸ್.ಎಸ್. ಸಾಯಣ್ಣವರ, ಚಿಕ್ಕೋಡಿ ಅಪರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್. ಗಡೇದ, ಕ್ರೀಡಾ ಇಲಾಖೆ ಉಪನಿರ್ದೆಶಕ ಬಿ ಶ್ರೀನಿವಾಸ್ ಸೇರಿದಂತೆ ಆರೋಗ್ಯಾಧಿಕಾರಿಗಳು, ಎನ್.ಜಿ.ಓ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !