ಹೊಸದಿಗಂತ ಡಿಜಿಟಲ್ ಡೆಸ್ಕ್:
ಶೃಂಗೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಆಯ್ಕೆ ಅಸಿಂಧು ಕೋರಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಅವರು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ ಹೈಕೋರ್ಟ್ 279 ಅಂಚೆ ಮತಪತ್ರಗಳನ್ನು ಎರಡು ವಾರದಲ್ಲಿ ಮರುಪರಿಶೀಲನೆ ಮಾಡುವಂತೆ ಆದೇಶ ಹೊರಡಿಸಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿರಾಜೇಗೌಡ ಅವರು 200 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ರಾಜೇಗೌಡ ಆಯ್ಕೆಯನ್ನು ಅಸಿಂಧಗೊಳಿಸಬೇಕು ಎಂದು ಕೋರಿ ಜೀವರಾಜ್ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಂಚೆ ಮತಗಳ ಎಣಿಕೆಯಲ್ಲಿ ಅಧಿಕಾರಿಗಳು ಲೋಪ ಎಸಗಿದ್ದು, ಚುನಾವಣೆಗೆ 120 ಕೋಟಿ ರೂ. ಖರ್ಚು ಮಾಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠ, 279 ಅಂಚೆ ಮತಪತ್ರಗಳ ಮರುಪರಿಶೀಲನೆಗೆ ಆದೇಶ ಹೊರಡಿಸಿದ್ದು, 2 ವಾರದಲ್ಲಿ ಮರುಪರಿಶೀಲನೆ ನಡೆಸಿ ಫಲಿತಾಂಶ ಪ್ರಕಟಿಸಲು ಆದೇಶ ಹೊರಡಿಸಿದೆ.
ಇದರ ಬೆನ್ನಲ್ಲೇ ಶಾಸಕ ಟಿ.ಡಿ. ರಾಜೇಗೌಡ ಅವರ ಪರ ವಕೀಲರು, ಈ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಬೇಕಿದ್ದು, ಆದೇಶಕ್ಕೆ ತಡೆ ನೀಡಬೇಕು ಎಂದು ಮನವಿ ಮಾಡಿದರು. ಆದರೆ ಎನ್.ಜೀವರಾಜ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಂತಿಮವಾಗಿ ಮೇಲ್ಮನವಿ ಸಲ್ಲಿಸಲು ಕಾಲಾವಕಾಶ ನೀಡುವ ಉದ್ದೇಶದಿಂದ ತನ್ನದೇ ತೀರ್ಪಿಗೆ ಎರಡು ವಾರಗಳ ಮಧ್ಯಂತರ ತಡೆ ನೀಡಿದೆ.



