ಹೊಸದಿಗಂತ ಡಿಜಿಟಲ್ ಡೆಸ್ಕ್:
ನಗರದ ಬಹುನಿರೀಕ್ಷಿತ ಅಭಿವೃದ್ಧಿ ಯೋಜನೆಗಳು ಮತ್ತು ಪ್ರಸ್ತುತ ಆಡಳಿತ ವ್ಯವಸ್ಥೆಯ ಕುರಿತು ಯದುವೀರ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಕುಕ್ಕರಹಳ್ಳಿ ಕೆರೆ ಬಳಿಯ ರೈಲ್ವೆ ಕ್ರಾಸಿಂಗ್‌ನಲ್ಲಿ ಅಂಡರ್‌ಪಾಸ್ ನಿರ್ಮಾಣಕ್ಕೆ ಇದ್ದ ತಾಂತ್ರಿಕ ಅಡೆತಡೆಗಳು ನಿವಾರಣೆಯಾಗಿದ್ದು, ಇಲಾಖೆಗಳಿಂದ ಅಧಿಕೃತ ಅನುಮತಿ ಸಿಕ್ಕಿದೆ. ಸುಮಾರು 15 ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ಅವರು ತಿಳಿಸಿದರು.
ನಗರದ ಆಡಳಿತ ವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಯದುವೀರ್, “ಅಧಿಕಾರಿಗಳು ಜನಪ್ರತಿನಿಧಿಗಳ ಸಲಹೆಗಳಿಗೆ ಕಿಮ್ಮತ್ತು ನೀಡುತ್ತಿಲ್ಲ” ಎಂದು ಆಕ್ಷೇಪಿಸಿದರು. ಹೆಬ್ಬಾಳ ಕೆರೆಗೆ ಯುಜಿಡಿ ನೀರು ಸೇರುತ್ತಿರುವುದು ಗಂಭೀರವಾದ ಸಮಸ್ಯೆಯಾಗಿದ್ದು, ಇದರ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಮೈಸೂರು ಮಹಾನಗರ ಪಾಲಿಕೆಯ ಕೌನ್ಸಿಲ್ ಇಲ್ಲದೆ ಏಕಪಕ್ಷೀಯವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಇದು ನಗರದ ಅಭಿವೃದ್ಧಿಗೆ ಮಾರಕವಾಗಿದ್ದು, ಕೂಡಲೇ ಚುನಾವಣೆ ನಡೆಸಿ ಜನಪ್ರತಿನಿಧಿಗಳು ಅಧಿಕಾರ ವಹಿಸಿಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಅಲ್ಲದೆ, ನಗರದಲ್ಲಿ ಅವಶ್ಯಕತೆ ಇಲ್ಲದ ಕಡೆಗಳಲ್ಲಿ ಅಳವಡಿಸಲಾಗಿರುವ ಸಿಗ್ನಲ್ ಲೈಟ್‌ಗಳ ಬಗ್ಗೆಯೂ ಅವರು ಆಡಳಿತವನ್ನು ತರಾಟೆಗೆ ತೆಗೆದುಕೊಂಡರು.



