April 8, 2026
Wednesday, April 8, 2026
spot_img

ಕೊಡಗಿನಲ್ಲಿ ಮುಂದುವರಿದ ಗಜಪಡೆ ಅಟ್ಟಹಾಸ: ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿ

ಹೊಸದಿಗಂತ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ ಮತ್ತು ಮಾನವನ ನಡುವಿನ ಸಂಘರ್ಷ ದಿನದಿಂದ ದಿನಕ್ಕೆ ಭೀಕರ ಸ್ವರೂಪ ಪಡೆದುಕೊಳ್ಳುತ್ತಿದೆ. ಬುಧವಾರ ಮುಂಜಾನೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಹೋಬಳಿಯಲ್ಲಿ ಕಾಡಾನೆಯೊಂದು ದಾಂಧಲೆ ನಡೆಸಿದ್ದು, ಪ್ರಗತಿಪರ ಬೆಳೆಗಾರರೊಬ್ಬರು ಆನೆಯ ದಾಳಿಗೆ ಸಿಲುಕಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

ಕಾಯಿಮಾನಿ ನಿವಾಸಿ ಮೂಕಳಮಾಡ ರತ್ತು ಎಂಬುವವರೇ ಮೃತಪಟ್ಟ ದುರ್ದೈವಿ. ಬುಧವಾರ ಬೆಳ್ಳಂಬೆಳಗ್ಗೆ ರತ್ತು ಅವರು ಕುರ್ಚಿ-ಕಾಯಿಮಾನಿ ನಡುವೆ ಇರುವ ತಮ್ಮ ಕಾಫಿ ತೋಟಕ್ಕೆ ಎಂದಿನಂತೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಏಕಾಏಕಿ ಎದುರಾದ ಕಾಡಾನೆ ಅವರ ಮೇಲೆ ತೀವ್ರವಾಗಿ ದಾಳಿ ನಡೆಸಿ, ತುಳಿದು ಸಾಯಿಸಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕುಟ್ಟ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಕಳೆದ ಕೆಲವು ದಿನಗಳಿಂದ ಶ್ರೀಮಂಗಲ ಹೋಬಳಿಯ ಕುರ್ಚಿ ಮತ್ತು ಕಾಯಿಮಾನಿ ಭಾಗದಲ್ಲಿ ಸುಮಾರು 8 ರಿಂದ 10 ಕಾಡಾನೆಗಳ ಹಿಂಡು ಬೀಡುಬಿಟ್ಟಿದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಹಗಲು ಹೊತ್ತಿನಲ್ಲೇ ಆನೆಗಳು ಪ್ರತ್ಯಕ್ಷವಾಗುತ್ತಿರುವುದರಿಂದ ತೋಟದ ಕೆಲಸಕ್ಕೆ ಹೋಗಲು ಕಾರ್ಮಿಕರು ಹಾಗೂ ಬೆಳೆಗಾರರು ಭಯಭೀತರಾಗಿದ್ದಾರೆ. ಅರಣ್ಯ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಈ ಆನೆಗಳ ಹಿಂಡನ್ನು ಕಾಡಿಗಟ್ಟಬೇಕು ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !