ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಲು ಹೈದರಾಬಾದ್‌ನಿಂದ ಕೇರಳಕ್ಕೆ ಹೊರಟಿದ್ದ ವ್ಯಕ್ತಿಯೊಬ್ಬರು ಮಾರ್ಗಮಧ್ಯೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಕಲೇಶಪುರದ ಮಳಲಿ ಬೈಪಾಸ್ ಬಳಿ ನಡೆದಿದೆ.
ಗಾಯಾಳುವನ್ನು ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಇವರು ಹೈದರಾಬಾದ್‌ನಲ್ಲಿ ಉದ್ಯೋಗದಲ್ಲಿದ್ದು, ಏಪ್ರಿಲ್ 9ರಂದು ಕೇರಳದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಲು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಸಕಲೇಶಪುರ ತಲುಪಿದಾಗ ಅತಿ ವೇಗದಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ರಸ್ತೆಯಿಂದ ಸುಮಾರು 25 ಅಡಿ ದೂರಕ್ಕೆ ಹಾರಿ ಬಿದ್ದಿದ್ದು, ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.
ತೀವ್ರವಾಗಿ ಗಾಯಗೊಂಡಿರುವ ಖಾದರ್ ಅವರಿಗೆ ಮೊದಲು ಸಕಲೇಶಪುರದ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಪರಿಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅತಿ ವೇಗವೇ ಈ ಅವಘಡಕ್ಕೆ ಮೂಲ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸ್ಥಳಕ್ಕೆ ಸಕಲೇಶಪುರ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.



