ಹೊಸ ದಿಗಂತ ಡಿಜಿಟಲ್ ಡೆಸ್ಕ್:
2026-27ನೇ ಸಾಲಿನಲ್ಲಿ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ಸರ್ಕಾರಿ ಹಾಗೂ ಖಾಸಗಿ ಕೋಟಾದ ಸೀಟುಗಳ ಶುಲ್ಕವನ್ನು ಶೇ.7.5ರಷ್ಟು ಹೆಚ್ಚಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ.
ಈ ಕುರಿತು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅಧ್ಯಕ್ಷತೆಯಲ್ಲಿ ನಡೆದ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರತಿನಿಧಿಗಳ ಸಭೆಯಲ್ಲಿ ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಖಾಸಗಿ ಕಾಲೇಜುಗಳಲ್ಲಿನ ಸಿಇಟಿ ಮೂಲಕ ಭರ್ತಿ ಮಾಡುವ ಶೇ.40ರಷ್ಟು ಸರ್ಕಾರಿ ಕೋಟಾದ ಸೀಟುಗಳ ಶುಲ್ಕ ಮತ್ತು ಕಾಮೆಡ್-ಕೆ ಮೂಲಕ ಭರ್ತಿ ಮಾಡುವ ಆಡಳಿತ ಮಂಡಳಿ ಕೋಟಾ ಸೀಟುಗಳ ಶುಲ್ಕ ಶೇ.7.5ರಷ್ಟು ಹೆಚ್ಚಳವಾಗಲಿದ್ದು,ಇದರಿಂದ ಇನ್ಮುಂದೆ ಎಂಜಿನಿಯರಿಂಗ್ ಪ್ರವೇಶ ಮತ್ತಷ್ಟು ದುಬಾರಿಯಾಗಲಿದೆ. ಆದರೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ ಸೀಟುಗಳ ಶುಲ್ಕದಲ್ಲಿ ಯಾವುದೇ ರೀತಿಯ ಹೆಚ್ಚಳ ಮಾಡದಿರಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಪ್ರತಿನಿಧಿಗಳು ಶೇ.10ರಿಂದ 15ರಷ್ಟು ಶುಲ್ಕ ಹೆಚ್ಚಳಕ್ಕೆ ಪ್ರಸ್ತಾವ ಸಲ್ಲಿಸಿದ್ದರು. ಆದರೆ ಸುದೀರ್ಘ ಚರ್ಚೆಯ ಬಳಿಕ ಶೇ.7.5ರಷ್ಟು ಶುಲ್ಕ ಹೆಚ್ಚಿಸಲು ಸರಕಾರ ಒಪ್ಪಿಗೆ ನೀಡಿದೆ. ಆದರೆ, ಸರ್ಕಾರಿ ಕಾಲೇಜುಗಳಲ್ಲಿನ ಸೀಟುಗಳ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದಿರಲು ಸೂಚನೆ ನೀಡಲಾಗಿದೆ.



