ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದರ ನಡುವೆ I-PAC ಸಹ-ಸಂಸ್ಥಾಪಕ ವಿನೇಶ್ ಚಾಂಡೆಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಕಲ್ಲಿದ್ದಲು ಕಳ್ಳಸಾಗಣೆ ಸಂಬಂಧಿತ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರಿಕೆ ಮತ್ತು ಪ್ರಚಾರ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಐ-ಪ್ಯಾಕ್’ ನಿರ್ದೇಶಕ ಹಾಗೂ ಸಹ-ಸಂಸ್ಥಾಪಕ ವಿನೇಶ್ ಚಾಂಡೇಲ್ ಅವರನ್ನು ಇಡಿ ಬಂಧಿಸಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ.
ಏಪ್ರಿಲ್ 13ರ ಸೋಮವಾರ ತಡರಾತ್ರಿ ದೆಹಲಿಯಲ್ಲಿ ವಶಕ್ಕೆ ಪಡೆಯಲಾಗಿದ್ದು, ಮಂಗಳವಾರ ದೆಹಲಿಯ ವಿಶೇಷ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಅವರನ್ನು 10 ದಿನಗಳ ಇ.ಡಿ. ಕಸ್ಟಡಿಗೆ ಒಪ್ಪಿಸಿದೆ.
ಪ್ರಕರಣ ಸಂಬಂಧ ಇಡಿ ಹಲವಾರು ತಿಂಗಳುಗಳಿಂದ ತನಿಖೆ ನಡೆಸುತ್ತಿದ್ದು,ಕೋಲ್ಕತ್ತಾದಲ್ಲಿರುವ ಐ-ಪ್ಯಾಕ್ ಕಚೇರಿ ಹಾಗೂ ಸಂಸ್ಥಾಪಕ ಪ್ರತೀಕ್ ಜೈನ್ ಅವರ ನಿವಾಸದ ಮೇಲೂ ಇಡಿ ದಾಳಿ ನಡೆಸಲಾಗಿತ್ತು. ಆ ಸಂದರ್ಭ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಥಳಕ್ಕೆ ಖುದ್ದಾಗಿ ಆಗಮಿಸಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.



