ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ರಾಜಕೀಯದಲ್ಲಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಜಾರಿ ನಿರ್ದೇಶನಾಲಯ (ED) ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ಅಶೋಕ್ ಮಿತ್ತಲ್ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಅಡಿಯಲ್ಲಿ ನಡೆಯುತ್ತಿರುವ ತನಿಖೆಯ ಭಾಗವಾಗಿ ಈ ದಾಳಿ ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಜಲಂಧರ್, ಫಗ್ವಾರಾ ಸೇರಿದಂತೆ ಪಂಜಾಬ್‌ನ ಹಲವು ವ್ಯಾಪಾರ ಹಾಗೂ ಶಿಕ್ಷಣ ಸಂಸ್ಥೆಗಳ ಆವರಣಗಳಲ್ಲಿ ಇಡಿ ತಂಡಗಳು ದಾಖಲೆಗಳ ಪರಿಶೀಲನೆ ನಡೆಸಿದವು. ಲವ್ಲಿ ಗ್ರೂಪ್ ಮುಖ್ಯಸ್ಥರಾಗಿರುವ ಅಶೋಕ್ ಮಿತ್ತಲ್ ಇತ್ತೀಚೆಗೆ ರಾಘವ್ ಚಡ್ಡಾ ಅವರ ಸ್ಥಾನಕ್ಕೆ ಆಪ್ ಪಕ್ಷದ ರಾಜ್ಯಸಭಾ ಉಪನಾಯಕರಾಗಿ ನೇಮಕಗೊಂಡಿದ್ದರು.
ಈ ಬೆಳವಣಿಗೆಗೆ ತೀವ್ರ ರಾಜಕೀಯ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಮ್ ಆದ್ಮಿ ಪಕ್ಷವು ಇದು ಚುನಾವಣೆ ಮುನ್ನ ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುವ ಕ್ರಮ ಎಂದು ಆರೋಪಿಸಿದೆ. ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಮುಖ್ಯಮಂತ್ರಿ ಭಗವಾಂತ್ ಮಾನ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಂಜಾಬ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಮುಂದಿನ ವರ್ಷದ ಆರಂಭದಲ್ಲಿ ಪಂಜಾಬ್ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆ ಈ ದಾಳಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.



