ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯದ 2026ರ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಒಟ್ಟಾರೆ ಶೇ. 94.1 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲೇ ಹೊಸ ದಾಖಲೆ ನಿರ್ಮಾಣವಾಗಿದೆ. ಈ ಅಭೂತಪೂರ್ವ ಸಾಧನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಅಪಾರ ಸಂತಸ ವ್ಯಕ್ತಪಡಿಸಿದ್ದಾರಾದರೂ, ಈ ಅನಿರೀಕ್ಷಿತ ಫಲಿತಾಂಶದ ಹಿಂದೆ ‘ಕೃಪಾಂಕ’ದ ಕೈವಾಡವಿದೆ ಎಂಬ ಆರೋಪ ಕೇಳಿಬಂದಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶದ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಶಿಕ್ಷಣ ಸಚಿವ ಹಾಗೂ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ಸರ್ಕಾರದ ಈ ಅಂಕಿ-ಅಂಶಗಳ ಬಗ್ಗೆ ತೀವ್ರ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ ವಾಸ್ತವ ಸ್ಥಿತಿಯನ್ನು ಎತ್ತಿ ತೋರಿಸಿದ ಅವರು, “ಯಾದಗಿರಿ, ಬಳ್ಳಾರಿ ಮತ್ತು ಬೀದರ್‌ನಂತಹ ಜಿಲ್ಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಸರಿಯಾಗಿ ಪಾಠ ಮಾಡಲು ಶಿಕ್ಷಕರೇ ಇಲ್ಲದಿರುವಾಗ ಇಷ್ಟು ದೊಡ್ಡ ಪ್ರಮಾಣದ ಫಲಿತಾಂಶ ಬರಲು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದ್ದಾರೆ.
ಕೇವಲ ಫಲಿತಾಂಶದ ಪ್ರಮಾಣ ಹೆಚ್ಚಿಸಲು ಸರ್ಕಾರ ವಿದ್ಯಾರ್ಥಿಗಳಿಗೆ ಹೆಚ್ಚಿನ ಕೃಪಾಂಕ ನೀಡಿ ಪಾಸ್ ಮಾಡುತ್ತಿದೆ ಎಂದು ವಿಶ್ವನಾಥ್ ಆರೋಪಿಸಿದ್ದಾರೆ. “ವಿದ್ಯಾರ್ಥಿಗಳನ್ನು ಕೇವಲ ದಾಖಲೆಗಾಗಿ ಪಾಸ್ ಮಾಡುವುದು ಸರಿಯಲ್ಲ. ಅವರಿಗೆ ಗುಣಮಟ್ಟದ ಶಿಕ್ಷಣ ನೀಡದಿದ್ದರೆ, ಮುಂದೆ ಅವರು ಉನ್ನತ ಶಿಕ್ಷಣದಲ್ಲಿ ತೀವ್ರ ತೊಂದರೆ ಅನುಭವಿಸುತ್ತಾರೆ. ಇದು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದಂತೆ,” ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆಯಾಗಿ, ಒಂದು ಕಡೆ ಫಲಿತಾಂಶದ ಸಂಭ್ರಮ ಮನೆಮಾಡಿದ್ದರೆ, ಇನ್ನೊಂದೆಡೆ ಶಿಕ್ಷಣ ವ್ಯವಸ್ಥೆಯ ಪಾರದರ್ಶಕತೆ ಮತ್ತು ಶಿಕ್ಷಕರ ಕೊರತೆಯ ಬಗ್ಗೆ ಗಂಭೀರ ಚರ್ಚೆಗಳು ಆರಂಭವಾಗಿವೆ.



