ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾನಗಲ್ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಸುಮಾರು ಒಂದು ಕೋಟಿ ರೂಪಾಯಿ ಮೌಲ್ಯದ ವೈದ್ಯಕೀಯ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಆಸ್ಪತ್ರೆಯ ಎರಡನೇ ಮಹಡಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ವ್ಯಾಪಿಸಿದ್ದು, ಎರಡನೇ ಮಹಡಿಯಲ್ಲಿದ್ದ ಸ್ಟೋರ್ ರೂಮ್ ಸಂಪೂರ್ಣವಾಗಿ ದಹನಗೊಂಡಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಪ್ರಾಥಮಿಕ ವರದಿಗಳ ಪ್ರಕಾರ, ಈ ದುರಂತದಲ್ಲಿ ಸುಮಾರು 1 ಕೋಟಿ ರೂ. ಮೌಲ್ಯದ ವಸ್ತುಗಳು ನಾಶವಾಗಿವೆ. ಇದರಲ್ಲಿ 40 ಲಕ್ಷ ರೂ. ಮೌಲ್ಯದ ವಿವಿಧ ಜೀವ ರಕ್ಷಕ ಔಷಧಿಗಳು. 50 ಲಕ್ಷ ರೂ. ಮೌಲ್ಯದ ಮಾತ್ರೆಗಳು ಮತ್ತು ಚುಚ್ಚುಮದ್ದುಗಳು. ಉಳಿದಂತೆ ಬೆಲೆಬಾಳುವ ವೈದ್ಯಕೀಯ ಉಪಕರಣಗಳು ಮತ್ತು ಪೀಠೋಪಕರಣಗಳು ಸುಟ್ಟು ಕರಕಲಾಗಿವೆ.
ಘಟನಾ ಸ್ಥಳಕ್ಕೆ ಹಾನಗಲ್ ಕ್ಷೇತ್ರದ ಶಾಸಕ ಶ್ರೀನಿವಾಸ ಮಾನೆ ಅವರು ತಕ್ಷಣ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ವೈದ್ಯರು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ನಷ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ರೋಗಿಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಮತ್ತು ಘಟನೆಯ ಬಗ್ಗೆ ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಹಾನಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ. ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಕೂಡಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ.



