April 27, 2026
Monday, April 27, 2026
spot_img

ಆರ್ಥಿಕ ದಿವಾಳಿಯಾಗಿರುವ ರಾಜ್ಯ ಸರಕಾರ ಚುನಾವಣೆ ನಡೆಸಲು ಹಿಂಜರಿಯುತ್ತಿದೆ: ಅಪ್ಪಚ್ಚುರಂಜನ್

ಹೊಸದಿಗಂತ ವರದಿ ಸೋಮವಾರಪೇಟೆ:

ಆರ್ಥಿಕವಾಗಿ ದಿವಾಳಿಯಾಗಿರುವ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಪಟ್ಟಣದ ತಾಲೂಕು ಪಂಚಾಯಿತಿ ಎದುರು ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಖ್ಯಮಂತ್ರಿ ಕುರ್ಚಿ ವಿಚಾರದಲ್ಲಿಯೇ ಬಿಝಿಯಾಗಿದೆ. ಬಿಟ್ಟಿ ಭಾಗ್ಯಗಳಿಂದ ಆರ್ಥಿಕವಾಗಿ ದಿವಾಳಿಯಾಗಿದ್ದು, ಕೆಎಸ್ಆರ್ಟಿಸಿ ಸೇರಿದಂತೆ ಹಲವು ಇಲಾಖೆಯ ಸಿಬ್ಬಂದಿಗಳಿಗೆ ಸಂಬಳ ನೀಡಲು ಹಣವಿಲ್ಲದಂತಾಗಿದೆ ಎಂದು ಆರೋಪಿಸಿದರು.

ಗ್ರಾಮ ಪಂಚಾಯತಿ ಅವಧಿ ಮುಗಿದಿದೆ. ತಾಲೂಕು ಪಂಚಾಯತ್ ಅವಧಿ ಮುಗಿದು ಹಲವು ವರ್ಷಗಳಾಗಿವೆ. ಆದರೂ ಸರ್ಕಾರ ಸುಮ್ಮನೆ ಕುಳಿತಿದೆ. ಇವರಿಗೆ ಚುನಾವಣೆ ನಡೆಸಲು ಹಣವಿಲ್ಲ ಅದಕ್ಕೆ ಎಂದು ವ್ಯಂಗ್ಯವಾಡಿದರು.
ಜಿಲ್ಲೆಯ ರಸ್ತೆಗಳು ಗುಂಡಿ ಬಿದ್ದು ಹಾಳಾಗಿದೆ ಆದರೂ ಗುಂಡಿ ಮುಚ್ಚದೆ ಜಾಣ ಕುರುಡು ಪ್ರದರ್ಶಿಸಲಾಗುತ್ತಿದೆ ಎಂದು ಆರೋಪಿಸಿದರು.
ವಿಧಾನಪರಿಷತ್ ಮಾಜಿ ಸದಸ್ಯ ಎಸ್.ಜಿ.ಮೇದಪ್ಪ ಮಾತನಾಡಿ, ಹಿಂದಿನ ಸರ್ಕಾರಗಳು ಜನಸಾಮಾನ್ಯರಿಗೆ ಅಧಿಕಾರ ನೀಡುವ ನಿಟ್ಟಿನಲ್ಲಿ ಅಧಿಕಾರ ವಿಕೇಂದ್ರೀಕರಣ ಮಾಡಿದ್ದವು. ಇಂದಿನ ಸರ್ಕಾರ ಚುನಾವಣೆ ನಡೆಸದೆ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.



Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !