April 30, 2026
Thursday, April 30, 2026
spot_img

ಜಾತಿ ಜನಗಣತಿ ಘೋಷಣೆಯಾಗಿ ವರ್ಷ ಕಳೆದರೂ ಪ್ರಗತಿ ಶೂನ್ಯ: ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರವು ದೇಶಾದ್ಯಂತ ಜಾತಿ ಜನಗಣತಿ ನಡೆಸುವುದಾಗಿ ಘೋಷಿಸಿ ಈಗ ಭರ್ತಿ ಒಂದು ವರ್ಷ ಕಳೆದಿದೆ. ಆದರೆ, ಈ ಪ್ರಕ್ರಿಯೆ ಯಾವಾಗ ಆರಂಭವಾಗುತ್ತದೆ ಮತ್ತು ಹೇಗೆ ನಡೆಯುತ್ತದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಇನ್ನೂ ಮೌನ ವಹಿಸಿರುವುದು ವಿರೋಧ ಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ಈ ವಿಳಂಬದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕೇಂದ್ರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡುವ ಮೂಲಕ ಕೇಂದ್ರ ಸರ್ಕಾರದ ಇಚ್ಛಾಶಕ್ತಿಯನ್ನು ಪ್ರಶ್ನಿಸಿದ್ದಾರೆ. “ಸರಿಯಾಗಿ ಒಂದು ವರ್ಷದ ಹಿಂದೆ, ಮುಂಬರುವ ಜನಗಣತಿಯಲ್ಲಿ ಜಾತಿ ಸಮೀಕ್ಷೆಯನ್ನು ಸೇರಿಸುವುದಾಗಿ ಮೋದಿ ಸರ್ಕಾರ ಘೋಷಿಸಿತ್ತು. ಆದರೆ ಇಂದಿಗೂ ಅದರ ನೀಲನಕ್ಷೆ ಸಿದ್ಧವಾಗಿಲ್ಲ” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಮಹತ್ವದ ಪ್ರಕ್ರಿಯೆಯ ಕುರಿತು ಕೇಂದ್ರ ಸರ್ಕಾರವು ಯಾವುದೇ ರಾಜ್ಯ ಸರ್ಕಾರಗಳ ಜೊತೆಗಾಗಲಿ, ವಿರೋಧ ಪಕ್ಷಗಳ ಜೊತೆಗಾಗಲಿ ಅಥವಾ ವಿಷಯ ತಜ್ಞರ ಜೊತೆಗಾಗಲಿ ಚರ್ಚೆ ನಡೆಸಿಲ್ಲ ಎಂಬುದು ಕಾಂಗ್ರೆಸ್ ವಾದ.

ಮೇ 5, 2025ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಪ್ರಧಾನಿಗೆ ಪತ್ರ ಬರೆದಿದ್ದರು. ಆ ಪತ್ರದಲ್ಲಿ ಎತ್ತಲಾದ ಕಳಕಳಿಗಳಿಗೆ ಸರ್ಕಾರದಿಂದ ಈವರೆಗೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ ಎಂದು ಜೈರಾಮ್ ರಮೇಶ್ ದೂರಿದ್ದಾರೆ.

ಇತ್ತೀಚೆಗೆ ಮುಕ್ತಾಯಗೊಂಡ ಸಂಸತ್ತಿನ ವಿಶೇಷ ಅಧಿವೇಶನದ ಬೆಳವಣಿಗೆಗಳನ್ನು ಗಮನಿಸಿದರೆ, ಪ್ರಧಾನಿ ನರೇಂದ್ರ ಮೋದಿ ಅವರು ಜಾತಿ ಜನಗಣತಿಯನ್ನು ಉದ್ದೇಶಪೂರ್ವಕವಾಗಿ ಮುಂದೂಡಲು ಬಯಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ ಎಂದು ಜೈರಾಮ್ ರಮೇಶ್ ಆರೋಪಿಸಿದ್ದಾರೆ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಈ ಗಣತಿ ಅತ್ಯಗತ್ಯ ಎಂಬುದು ವಿರೋಧ ಪಕ್ಷಗಳ ಬಲವಾದ ನಿಲುವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !