ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿದ್ದ ಸಿಇಟಿ ಪರೀಕ್ಷೆ ವೇಳೆ ನಡೆದ ವಸ್ತ್ರಸಂಹಿತೆ ಗೊಂದಲಕ್ಕೆ ಕೊನೆಗೂ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ತೆರೆ ಎಳೆದಿದ್ದು, ಸಮಸ್ಯೆಗೆ ಒಳಗಾದ ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮತ್ತು ಚಿಕ್ಕಬಳ್ಳಾಪುರ ಎರಡು ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಹಾಗೂ ಹಿಜಾಬ್ಗೆ ಸಂಬಂಧಿಸಿದಂತೆ ಸಮಸ್ಯೆ ಉಂಟಾಗಿದೆ. ಹೀಗಾಗಿ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆಗೆ ಒಳಗಾದ ನಾಲ್ವರು ಪರೀಕ್ಷಾರ್ಥಿಗಳಿಗೆ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದರು.
ಆ ಪರೀಕ್ಷಾರ್ಥಿಗಳಿಗೆ ಗ್ರೇಸ್ ಅಂಕ ನೀಡಿದರೆ ಉತ್ತಮ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಅದು ಸಮಂಜಸ ಅಲ್ಲ. ಹಾಗಾಗಿ ಮರು ಪರೀಕ್ಷೆ ಮಾಡುತ್ತೇವೆ ಎಂದರು.
ಚಿಕ್ಕಬಳ್ಳಾಪುರದ ಖಾಸಗಿ ಕಾಲೇಜಿನಲ್ಲಿ ಭೌತಶಾಸ್ತ್ರದ ಸಿಇಟಿ ಪರೀಕ್ಷೆ ವೇಳೆ ಹಿಜಾಬ್ ಧರಿಸಿ ಆಗಮಿಸಿದ್ದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಲಾಗಿತ್ತು. ಅದೇ ರೀತಿ ಸಿಇಟಿ ಪರೀಕ್ಷೆ ವೇಳೆ ಭದ್ರತಾ ತಪಾಸಣೆಯ ನೆಪದಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳ ಜನಿವಾರವನ್ನು ತೆಗೆಸಲಾಗಿತ್ತು. ಈ ಘಟನೆಯು ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.



