ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ನಡುವೆ ಇಂದು ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಅವರು ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ದೂರವಾಣಿ ಕರೆ ಮಾಡಿ ಪ್ರಸ್ತುತ ಸ್ಥಿತಿಗತಿಗಳ ಕುರಿತು ಮಾತುಕತೆ ನಡೆಸಿದ್ದಾರೆ.
ಈಗಾಗಲೇ ಯುದ್ಧದಿಂದಾಗಿ ಹಾರ್ಮುಜ್ ಜಲಸಂಧಿಯಲ್ಲಿನ ಹಡಗುಗಳ ಸಂಚಾರಕ್ಕೆ ನಿರ್ಬಂಧ ಹೇರಿದ್ದ ಬಳಿಕ ಜಾಗತಿಕಮಟ್ಟದಲ್ಲಿ ತೈಲ ಪೂರೈಕೆಯಲ್ಲಿ ಅಭಾವ ಉಂಟಾಗಿದೆ. ಇದರ ನಡುವೆ ಈ ಮಾತುಕತೆ ಹೆಚ್ಚು ಮಹತ್ವ ಪಡೆದಿದೆ.
ಈ ಕುರಿತು ಮಾಹಿತಿ ಹಂಚಿಕೊಂಡ ಜೈಶಂಕರ್, ‘ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ಚಿ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಯಿತು. ಈ ವೇಳೆ ಪ್ರಸ್ತುತ ಪರಿಸ್ಥಿತಿಯ ಕುರಿತು ವಿವರವಾಗಿ ಸಂಭಾಷಣೆ ನಡೆಸಿದ್ದೇವೆ. ಜೊತೆಗೆ ಮುಂದಿನ ದಿನಗಳಲ್ಲಿ ಪರಸ್ಪರ ಉತ್ತಮ ಒಡನಾಟದಿಂದ ಇರಲು ಸಮ್ಮತಿಸಿದ್ದೇವೆ’ ಎಂದು ತಿಳಿಸಿದರು.
ಇದರ ಜೊತೆಗೆ ಇರಾನ್ ಬಂದರುಗಳ ಮೇಲೆ ಅಮೆರಿಕ ಹೇರಿರುವ ದಿಗ್ಬಂಧನ ಹಾಗೂ ಹಾರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಸಂಚಾರಕ್ಕೆ ಹೇರಿದ್ದ ನಿರ್ಬಂಧಗಳ ಕುರಿತು ಚರ್ಚೆ ನಡೆದಿದೆ ಎನ್ನಲಾಗಿದೆ.



