ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಿ ವಿಧಾನಸಭೆ ಕಾರ್ಯದರ್ಶಿ ಮಹತ್ವದ ಆದೇಶ ಹೊರಡಿಸಿದ್ದಾರೆ.
ಭಾರತೀಯ ಸಂವಿಧಾನ ಮತ್ತು ಜನಪ್ರತಿನಿಧಿ ಕಾಯ್ದೆಯ ನಿಯಮಾವಳಿಗಳ ಅನ್ವಯ, ಏಪ್ರಿಲ್ 15ರಿಂದಲೇ ಅನ್ವಯವಾಗುವಂತೆ ವಿನಯ್ ಕುಲಕರ್ಣಿ ಅವರನ್ನು ಸದಸ್ಯತ್ವದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ನಿಯಮಗಳ ಪ್ರಕಾರ, ಯಾವುದೇ ಜನಪ್ರತಿನಿಧಿಗೆ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆಯಾದಲ್ಲಿ ಅವರು ತಕ್ಷಣವೇ ಶಾಸಕ ಸ್ಥಾನಕ್ಕೆ ಅನರ್ಹರಾಗುತ್ತಾರೆ.
ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ ನಂತರದ ಕೆಲವೇ ದಿನಗಳಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.



