May 3, 2026
Sunday, May 3, 2026
spot_img

WEATHER | ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಹವಾಮಾನದಲ್ಲಿ ಭಾರಿ ಏರುಪೇರು ಉಂಟಾಗುತ್ತಿದ್ದು, ಹಲವೆಡೆ ಆಲಿಕಲ್ಲು ಮಳೆಯ ಅಬ್ಬರ ಜೋರಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮುನ್ಸೂಚನೆಯಂತೆ, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಇಂದೂ ಸಹ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಒಂದೆಡೆ ಮಳೆಯ ಅಬ್ಬರವಾದರೆ, ಇನ್ನೊಂದೆಡೆ ಉತ್ತರ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ ಮತ್ತು ರಾಯಚೂರಿನಲ್ಲಿ ತಾಪಮಾನ ಏರಿಕೆಯಾಗುತ್ತಿದೆ. ಈ ಭಾಗಗಳಲ್ಲಿ ಇಂದು ಗರಿಷ್ಠ 42 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ ದಾಖಲಾಗಲಿದ್ದು, ಮುಂದಿನ ಮೂರು ದಿನಗಳ ಕಾಲ ಇದೇ ರೀತಿಯ ಬಿಸಿ ವಾತಾವರಣ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ. ಆದರೆ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಒಣ ಹವೆ ಇರಲಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಉತ್ತರ ಕರ್ನಾಟಕದ ಕಲ್ಬುರ್ಗಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಶುಷ್ಕ ಹವಾಮಾನವಿರಲಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದು ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಮುನ್ನೆಚ್ಚರಿಕೆ: ಮಳೆ ಮತ್ತು ಗಾಳಿಯ ಸಂದರ್ಭದಲ್ಲಿ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ಹಾಗೂ ವಿದ್ಯುತ್ ಕಂಬ ಮತ್ತು ಮರಗಳ ಕೆಳಗೆ ನಿಲ್ಲದಂತೆ ಹವಾಮಾನ ಇಲಾಖೆ ಸೂಚಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !