May 7, 2026
Thursday, May 7, 2026
spot_img

ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರ: ಸುವೇಂದು ಅಧಿಕಾರಿ ಆಪ್ತ ಸಹಾಯಕನ ಭೀಕರ ಹ*ತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ದಶಕಗಳ ಕಾಲ ಆಳ್ವಿಕೆ ನಡೆಸಿದ್ದ ತೃಣಮೂಲ ಕಾಂಗ್ರೆಸ್ ಆಡಳಿತಕ್ಕೆ ಅಂತ್ಯ ಹಾಡಿ, ಬಿಜೆಪಿ ಐತಿಹಾಸಿಕ ಜಯಭೇರಿ ಬಾರಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಚುನಾವಣೋತ್ತರ ಹಿಂಸಾಚಾರ ಭುಗಿಲೆದ್ದಿದೆ. ಉತ್ತರ 24 ಪರಗಣ ಜಿಲ್ಲೆಯ ಮಧ್ಯಮಗ್ರಾಮದಲ್ಲಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಬುಧವಾರ ರಾತ್ರಿ ಸುಮಾರು 10.20ರ ಸುಮಾರಿಗೆ ಚಂದ್ರನಾಥ್ ರಥ್ ಅವರು ಕಾರಿನಲ್ಲಿ ಮನೆಗೆ ಮರಳುತ್ತಿದ್ದರು. ಈ ವೇಳೆ ದೊಹಾರಿಯಾ ಪ್ರದೇಶದಲ್ಲಿ ಬೈಕ್‌ನಲ್ಲಿ ಬಂದ ಅಪರಿಚಿತ ಹಂತಕರು ಕಾರನ್ನು ಅಡ್ಡಗಟ್ಟಿ, ರಥ್ ಅವರ ಮೇಲೆ ಮನಬಂದಂತೆ ಗುಂಡಿನ ಮಳೆಗರೆದಿದ್ದಾರೆ. ತೀವ್ರವಾಗಿ ಗಾಯಗೊಂಡ ರಥ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗುಂಡಿನ ದಾಳಿಯಲ್ಲಿ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಸದ್ಯ ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಇದು ಅತ್ಯಂತ ಯೋಜಿತವಾಗಿ ನಡೆದ ಹತ್ಯೆಯಾಗಿದೆ. “ಹಂತಕರು ರಥ್ ಅವರ ಮೇಲೆ ಗುಂಡು ಹಾರಿಸಿದ ನಂತರ, ಅವರು ಮೃತಪಟ್ಟಿದ್ದಾರೆ ಎಂದು ಖಚಿತಪಡಿಸಿಕೊಳ್ಳುವವರೆಗೂ ಸ್ಥಳದಲ್ಲೇ ಕಾದು ನಿಂತಿದ್ದರು” ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ಕೊಲೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಸಮಿಕ್ ಭಟ್ಟಾಚಾರ್ಯ ತೀವ್ರವಾಗಿ ಖಂಡಿಸಿದ್ದಾರೆ. “ಟಿಎಂಸಿ ಸೋಲಿನ ಹತಾಶೆಯಿಂದ ಇಂತಹ ಕೆಳಮಟ್ಟದ ರಾಜಕಾರಣಕ್ಕೆ ಇಳಿದಿದೆ. ವಿರೋಧ ಪಕ್ಷದ ನಾಯಕನ ಆಪ್ತ ಸಹಾಯಕನನ್ನೇ ಕೊಲ್ಲುವ ಮೂಲಕ ಜನರಿಗೆ ಮತ್ತು ಕಾರ್ಯಕರ್ತರಿಗೆ ಭಯದ ಸಂದೇಶ ರವಾನಿಸಲಾಗುತ್ತಿದೆ. ನಾವು ಇದರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ, ಆಡಳಿತ ವಿರೋಧಿ ಅಲೆಯ ನಡುವೆಯೂ ಟಿಎಂಸಿ ಈ ಆರೋಪವನ್ನು ನಿರಾಕರಿಸಿದೆ. ಘಟನೆಯನ್ನು ಖಂಡಿಸಿರುವ ಟಿಎಂಸಿ, “ಪ್ರಜಾಪ್ರಭುತ್ವದಲ್ಲಿ ಹಿಂಸೆಗೆ ಅವಕಾಶವಿಲ್ಲ. ಈ ಹತ್ಯೆಯ ಬಗ್ಗೆ ನ್ಯಾಯಾಲಯದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಯಾಗಲಿ” ಎಂದು ಎಕ್ಸ್ ಮೂಲಕ ಆಗ್ರಹಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !