September 12, 2026
Saturday, September 12, 2026
spot_img

ರಾಜ್ಯ ಸಚಿವ ಸಂಪುಟ ಸಭೆ: ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ಕೋರ್ಟ್ ಮೆಟ್ಟಿಲೇರಲು ನಿರ್ಧಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ರಾಜ್ಯ ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆಯು ನಡೆಯಿತು. ಈ ವೇಳೆ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್, ಕೇಂದ್ರ ಸರ್ಕಾರವು ಮನರೇಗಾ ಯೋಜನೆಯನ್ನು ರದ್ದುಗೊಳಿಸಿ ವಿಬಿ-ಜಿ ರಾಮ್ ಜಿ ಕಾಯ್ದೆ ಜಾರಿಗೆ ತಂದಿದೆ. ಇದರ ವಿರುದ್ಧ ಕೋರ್ಟ್ ಮೆಟ್ಟಿಲೇರಲು ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಈ ಯೋಜನೆ ಕುರಿತು ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಇದರ ಬಗ್ಗೆ ಯಾವುದೇ ರೀತಿಯ ಸ್ಪಷ್ಟತೆ ಇಲ್ಲ. ಜೊತೆಗೆ ಹಳೆಯ ಬಾಕಿ ಹಣವನ್ನೂ ಬಿಡುಗಡೆ ಮಾಡಿಲ್ಲ ಎಂದು ಕೇಂದ್ರದ ವಿರುದ್ಧ ಆಕ್ರೋಶ ಹೊರಹಾಕಿದರು.

ಈಗಾಗಲೇ ಈ ಕುರಿತು ಸೂಕ್ತ ಕ್ರಮಕ್ಕೆ ಸಿಎಂ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಇದೀಗ ಕಾನೂನು ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ರಾಜ್ಯ ಶಿಕ್ಷಣ ನೀತಿಯನ್ನು ಅನುಷ್ಠಾನಗೊಳಿಸಲು ನಿರ್ಣಯ ಕೈಗೊಳ್ಳಲಾಗಿದೆ. ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ಹಾಸಿಗೆ ಸಾಮರ್ಥ್ಯವನ್ನು 400 ರಿಂದ 600ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ.

ಅದೇ ರೀತಿ ಮೈಸೂರು ಮತ್ತು ಬನ್ನೇರುಘಟ್ಟ ಮೃಗಾಲಯಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಡಿಜಿಟಲ್ ಗೈಡ್ ವ್ಯವಸ್ಥೆ ಜಾರಿ ಬನ್ನೇರುಘಟ್ಟದಲ್ಲಿ 144 ಕೋಟಿ ರೂ. ವೆಚ್ಚದಲ್ಲಿ ಮತ್ಸ್ಯಾಗಾರ ಅಭಿವೃದ್ಧಿ ಮಾಡಲು ತೀರ್ಮಾನ ಮಾಡಲಾಗಿದೆ.

ದಕ್ಷಿಣ ಕನ್ನಡದ ಕುಕ್ಕೆ ಸುಬ್ರಮಣ್ಯ ದೇಗುಲದ ವಿವಿಧ ಕಾಮಗಾರಿಗಳಿಗಾಗಿ 604 ಕೋಟಿ ರೂ.ಅನುದಾನ ಬಿಡುಗಡೆಗೆ ಸಚಿವ ಸಂಪುಟ ಸಮ್ಮತಿ ನೀಡಿದೆ. ಇದರ ಜೊತೆಗೆ ಘಾಟಿ ಸುಬ್ರಮಣ್ಯ ದೇಗುಲದ ಅಭಿವೃದ್ಧಿಗೆ 23.76 ಕೋಟಿ ರೂ. ಮೀಸಲಿಡಲಾಗಿದೆ ಎಂದು ತಿಳಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !