May 10, 2026
Sunday, May 10, 2026
spot_img

ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ವಿಧಿವಶ: ಗಣ್ಯರಿಂದ ಸಂತಾಪ

ಹೊಸದಿಗಂತ ವರದಿ ಚಿತ್ರದುರ್ಗ:

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಹಿರಿಯೂರು ನಗರದ ನೆಹರು ಮೈದಾನದಲ್ಲಿ ಭಾನುವಾರ ಡಿ.ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರುಶನ ಪಡೆದ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ನಾನು ಮತ್ತು ಸುಧಾಕರ್ ಅವರು ಆಪ್ತ ಸ್ನೇಹಿತರು. ಇಷ್ಟು ಚಿಕ್ಕ ವಯಸ್ಸಿನಲ್ಲೇ ಅವರು ನಮ್ಮನ್ನು ಅಗಲುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ,” ಎಂದು ಭಾವುಕರಾದರು.

ಸುಧಾಕರ್ ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗಾಗಿ, ಅದರಲ್ಲೂ ವಿಶೇಷವಾಗಿ ರೈತರ ಬದುಕಿನಲ್ಲಿ ಬದಲಾವಣೆ ತರಲು ನಿರಂತರವಾಗಿ ಶ್ರಮಿಸಿದವರು. ಈ ಭಾಗದ ರೈತರ ಹಿತದೃಷ್ಟಿಯಿಂದ ಭದ್ರಾ ಮೇಲ್ದಂಡೆ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ಅವರು ಶ್ರಮಿಸಿದ್ದರು. ಟ್ರಯಲ್ ರನ್ ವೇಳೆ ನೀರು ಬಿಡಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ವೈ ಜಂಕ್ಷನ್ ಬಳಿಯ ದೀರ್ಘಕಾಲದ ಸಮಸ್ಯೆ ಬಗೆಹರಿಸಲು ಶಾಸಕರನ್ನು ಒಟ್ಟುಗೂಡಿಸಿ ಹೋರಾಟ ಮಾಡಿದ್ದರು ಎಂದರು.

ಸಂಸದ ಗೋವಿಂದ ಎಂ. ಕಾರಜೋಳ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ನಿಧನದ ಸುದ್ದಿ ನಂಬಲು ಸಾಧ್ಯವಾಗುತ್ತಿಲ್ಲ. ಸುಧಾಕರ್ ಅವರು ಒಬ್ಬ ಸಜ್ಜನ ರಾಜಕಾರಣಿಯಾಗಿದ್ದರು. ಸಮಾಜದಲ್ಲಿ ಎಲ್ಲರೊಂದಿಗೆ ಬೆರೆತು, ಜನರ ಪ್ರೀತಿಗೆ ಪಾತ್ರರಾಗಿದ್ದವರು. ಇಂತಹ ಜನಪ್ರಿಯ ವ್ಯಕ್ತಿ ಇಂದು ನಮ್ಮನ್ನು ಅಗಲಿರುವುದು ಇಡೀ ಜಿಲ್ಲೆಗೆ ತುಂಬಲಾರದ ನಷ್ಟವಾಗಿದೆ ಎಂದರು.

ಇದನ್ನೂ ಓದಿ:

ಸುಧಾಕರ್ ಅವರೊಂದಿಗೆ ಕೆಲಸ ಮಾಡಿದ ದಿನಗಳನ್ನು ನೆನಪಿಸಿಕೊಂಡ ಕಾರಜೋಳ, “ನಾನು ಸಚಿವನಾಗಿದ್ದಾಗ ಅವರು ಕೂಡ ನನ್ನ ಸಹೋದ್ಯೋಗಿಯಾಗಿ ಕೆಲಸ ಮಾಡಿದ್ದರು. ಅವರ ಸೌಮ್ಯ ಸ್ವಭಾವ ಮತ್ತು ಕಾರ್ಯವೈಖರಿ ಎಲ್ಲರಿಗೂ ಮಾದರಿಯಾಗಿತ್ತು. ರಾಜಕಾರಣದಲ್ಲಿ ಇರುವವರು ಸಮಾಜಕ್ಕೆ ಮಾದರಿಯಾಗಿ ಬದುಕಬೇಕು ಎನ್ನುವ ತತ್ವಕ್ಕೆ ಅವರು ಕನ್ನಡಿಯಂತಿದ್ದರು ಎಂದು ಹೇಳಿದರು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬ ಆಘಾತವಾಗಿದೆ. ಅವರು ಜಿಲ್ಲೆಯ ಅಭಿವೃದ್ಧಿಗಾಗಿ ಅಹೋರಾತ್ರಿ ಶ್ರಮಿಸಿದ ಜನಪ್ರಿಯ ನಾಯಕ. ಸಚಿವರ ಅಗಲಿಕೆ ಚಿತ್ರದುರ್ಗ ಜಿಲ್ಲೆಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾಗಿ ಅಧಿಕಾರ ವಹಿಸಿಕೊಂಡ ನಂತರ ಜಿಲ್ಲೆಯ ಅನೇಕ ಕುಂಠಿತಗೊಂಡಿದ್ದ ಯೋಜನೆಗಳಿಗೆ ಚಾಲನೆ ನೀಡಿದ್ದರು. ಜನರ ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಗುಣ ಅವರಲ್ಲಿತ್ತು ಎಂದು ಸ್ಮರಿಸಿದರು.

ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಡಿ.ಸುಧಾಕರ್ ಅವರು ಒಬ್ಬ ಸ್ನೇಹಜೀವಿ ಮತ್ತು ಅಭಿವೃದ್ಧಿ ಪರ ಚಿಂತನೆಯುಳ್ಳವರಾಗಿದ್ದರು. 40 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಹಂತ ಹಂತವಾಗಿ ಮುನ್ನೆಲೆಗೆ ಬಂದು ಜನಸೇವೆ ಮಾಡಿದ್ದರು. ಜಿಲ್ಲೆಯ ಅಭಿವೃದ್ಧಿಯಲ್ಲಿ ಸದಾ ಆಸಕ್ತಿ ಹೊಂದಿದ್ದ ಅವರು ಭದ್ರಾ ಮೇಲ್ದಂಡೆ ಯೋಜನೆ, ಕೆರೆಗಳಿಗೆ ನೀರು ತುಂಬಿಸುವ ಕೆಲಸಗಳಿಗಾಗಿ ಸಾಕಷ್ಟು ಶ್ರಮಿಸಿದ್ದರು. ಜಿಲ್ಲೆಯ ಒಬ್ಬ ಸಮರ್ಥ ನಾಯಕನನ್ನು ಕಳೆದುಕೊಂಡಿರುವುದು ಅತ್ಯಂತ ದುರದೃಷ್ಟಕರ ಸಂಗತಿ ಎಂದರು.

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ವಿಜ್ಞಾನ ತಂತ್ರಜ್ಞಾನ ಹಾಗೂ ಸಣ್ಣ ನೀರಾವರಿ ಸಚಿವ ಬೋಸರಾಜು, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಅಧ್ಯಕ್ಷ ಪಿ.ರಘು, ವಿಧಾನ ಪರಿಷತ್ ಸದಸ್ಯ ಡಿ.ಟಿ.ಶ್ರೀನಿವಾಸ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ಜಿ.ಪಂ.ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ಸಚಿವರ ಅಪಾರ ಅಭಿಮಾನಿಗಳು ಅಂತಿಮ ದರುಶನ ಪಡೆದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !