ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಭಾರೀ ಸುದ್ದಿಯಾಗಿದ್ದ ‘ಹಿಜಾಬ್’ ನಿಷೇಧ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ವಾಪಾಸ್ ಪಡೆದುಕೊಂಡಿದೆ.
2022ರಲ್ಲಿ ಅಂದಿನ ಸರ್ಕಾರ ಜಾರಿಗೆ ತಂದಿದ್ದ ಸಮವಸ್ತ್ರ ಸಂಹಿತೆಯ ಆದೇಶವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆದಿದೆ. ಈ ಮೂಲಕ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ವೈಯಕ್ತಿಕ ನಂಬಿಕೆಗಳ ನಡುವೆ ಸಮತೋಲನ ಸಾಧಿಸುವ ಉದ್ದೇಶದಿಂದ ಸರ್ಕಾರವು ನಿರ್ಧಾರ ತೆಗೆದುಕೊಂಡಿದೆ ಎಂದು ತಿಳಿಸಲಾಗಿದೆ.
ಹೊಸ ಆದೇಶದ ಪ್ರಕಾರ, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರದ ಜೊತೆಗೆ ಪೂರಕವಾಗಿರುವ ಸೀಮಿತ ಸಾಂಪ್ರದಾಯಿಕ ಹಾಗೂ ನಂಬಿಕೆ ಆಧಾರಿತ ಗುರುತುಗಳನ್ನು ಧರಿಸಲು ಅನುಮತಿ ನೀಡಲಾಗಿದೆ. ಇದರ ಜೊತೆಗೆ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಅಗತ್ಯಕ್ಕೆ ಅನುಗುಣವಾಗಿ ಸಮವಸ್ತ್ರವನ್ನು ನಿಗದಿಪಡಿಸುವ ಅಧಿಕಾರ ಇರಲಿದೆ ಎಂದು ತಿಳಿಸಿದೆ.
ವಿದ್ಯಾರ್ಥಿಗಳು ತಮ್ಮ ಸಾಂಪ್ರದಾಯಿಕ ಸಂಕೇತಗಳಿಗೆ ಅನುಗುಣವಾಗಿ ಪೇಟ, ಜನಿವಾರ, ಶಿವದಾರ, ರುದ್ರಾಕ್ಷಿ, ಹಾಗೂ ಹಿಜಾಬ್ ಧರಿಸಲು ಅವಕಾಶವಿದೆ . ಇದೇ ವೇಳೆ ಯಾವುದೇ ವಿದ್ಯಾರ್ಥಿಯು ಸಾಂಪ್ರದಾಯಿಕ ಗುರುತುಗಳನ್ನು ಧರಿಸಿದ್ದಾರೆ ಎಂಬ ಕಾರಣಕ್ಕಾಗಿ ತರಗತಿ ಅಥವಾ ಪರೀಕ್ಷಾ ಕೊಠಡಿಗಳಿಗೆ ಪ್ರವೇಶ ನಿರಾಕರಿಸುವಂತಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಶಿಸ್ತು, ಸುರಕ್ಷತೆ ಮತ್ತು ವಿದ್ಯಾರ್ಥಿಯ ಗುರುತಿಸುವಿಕೆಗೆ ಯಾವುದೇ ತೊಂದರೆ ನೀಡಬಾರದು ಎಂಬ ತಿಳಿಸಿದೆ.
ಈ ಹೊಸ ಮಾರ್ಗಸೂಚಿಗಳು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ-ಕಾಲೇಜುಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಅನ್ವಯವಾಗಲಿವೆ. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.



