ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳ ಕಾಂಗ್ರೆಸ್ನಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಅಂತಿಮ ಹಂತಕ್ಕೆ ತಲುಪಿದ್ದು, ಅಚ್ಚರಿಯ ಬೆಳವಣಿಗೆಯಲ್ಲಿ ವಿ.ಡಿ. ಸತೀಶನ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲು ಕಾಂಗ್ರೆಸ್ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮಹತ್ವದ ನಿರ್ಧಾರದ ಹಿಂದೆ ಹೈಕಮಾಂಡ್ನ ಒಂದು ದೂರಗಾಮಿ ‘ರಾಜಕೀಯ ಡೀಲ್’ ಅಡಗಿದೆ ಎನ್ನಲಾಗುತ್ತಿದೆ.
ಕೇರಳದ ಸಿಎಂ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿಯಾಗಿದ್ದ ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಈಗ ರೇಸ್ನಿಂದ ಹಿಂದೆ ಸರಿದಿದ್ದಾರೆ. ಮೂಲಗಳ ಪ್ರಕಾರ, ಪ್ರಸ್ತುತ ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರ ಅಧಿಕಾರ ಅವಧಿ ಮುಗಿದ ನಂತರ, ವೇಣುಗೋಪಾಲ್ ಅವರಿಗೆ ಆ ಉನ್ನತ ಸ್ಥಾನವನ್ನು ನೀಡುವ ಭರವಸೆಯನ್ನು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನೀಡಿದ್ದಾರೆ ಎನ್ನಲಾಗಿದೆ. ರಾಷ್ಟ್ರ ರಾಜಕಾರಣದಲ್ಲಿ ದೊಡ್ಡ ಜವಾಬ್ದಾರಿ ಸಿಗಲಿರುವ ಹಿನ್ನೆಲೆಯಲ್ಲಿ ವೇಣುಗೋಪಾಲ್ ರಾಜ್ಯ ರಾಜಕಾರಣದಿಂದ ಹಿಂದೆ ಸರಿಯಲು ಒಪ್ಪಿದ್ದಾರೆ.
ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಕೇರಳ ಕಾಂಗ್ರೆಸ್ನಲ್ಲಿ ಉಂಟಾಗಿದ್ದ ಬಿಕ್ಕಟ್ಟು ಸದ್ಯಕ್ಕೆ ಶಮನಗೊಂಡಂತಿದೆ. ಒಂದು ಕಡೆ ದೆಹಲಿಯಲ್ಲಿ ವೇಣುಗೋಪಾಲ್ ಅವರ ಹಿಡಿತ ಬಲಗೊಳ್ಳುತ್ತಿದ್ದರೆ, ಇನ್ನೊಂದೆಡೆ ಕೇರಳದಲ್ಲಿ ಸತೀಶನ್ ಯುಗ ಆರಂಭವಾಗುವ ಲಕ್ಷಣಗಳು ದಟ್ಟವಾಗಿವೆ.



