ಹೊಸದಿಗಂತ ವರದಿ ಚಿತ್ರದುರ್ಗ:
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಮುಖಂಡರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಜಿಲ್ಲಾ ಘಟಕದ ಕಾರ್ಯಕರ್ತರು ಗುರುವಾರ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಇತ್ತೀಚೆಗೆ ತುಮಕೂರಿನಲ್ಲಿ ನಡೆದ ‘ಜನತಾ ದರ್ಶನ’ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಬಂದಿದ್ದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನಾಯಕರ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ. ಅಲ್ಲದೇ ಸುಳ್ಳು ಪ್ರಕರಣ ದಾಖಲಿಸಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಅವರ ಸೂಚನೆಯ ಮೇರೆಗೆ ಕೆಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಸೋಮಸುಂದರ್ ಕೆ.ಎಸ್., ಕಾರ್ಯದರ್ಶಿ ಮಲ್ಲಿಕಾರ್ಜುನಯ್ಯ ಭಟ್ಟರಹಳ್ಳಿ ಸೇರಿದಂತೆ ಇತರ ನಾಯಕರ ವಿರುದ್ಧ ರಾಜಕೀಯ ದ್ವೇಷದಿಂದ ಪ್ರಕರಣ ದಾಖಲಿಸಲಾಗಿದೆ ಎಂದು ದೂರಿದರು.
ಯಾವುದೇ ರಸ್ತೆ ತಡೆ ಅಥವಾ ಧರಣಿ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡದೆ, ನಮ್ಮ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಶಿಸ್ತುಬದ್ಧವಾಗಿ ಜನತಾ ದರ್ಶನಕ್ಕೆ ತೆರಳಿ ಮನವಿ ಸಲ್ಲಿಸಿದ್ದಾರೆ. ಅದರಂತೆ ಸ್ಥಳೀಯವಾಗಿ ಜಿಲ್ಲಾಧಿಕಾರಿಗಳು, ತಹಶೀಲ್ದಾರರ ಮೂಲಕ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಲಾಗಿದೆ. ಹೀಗೆ ಸಾರ್ವಜನಿಕರ ಅಹವಾಲು ಸಲ್ಲಿಸಲು ಬಂದವರ ವಿರುದ್ಧವೇ ಪ್ರಕರಣ ದಾಖಲಿಸುವುದು ಎಷ್ಟರಮಟ್ಟಿಗೆ ಸರಿ. ಸಾರ್ವಜನಿಕ ಸ್ಥಳದಲ್ಲಿ ನಡೆಯುವ ಜನತಾ ದರ್ಶನದ ವೀಡಿಯೋ ಮಾಡಿದ್ದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:
ಬಿಎನ್‌ಎಸ್ ಕಾಯಿದೆ ಪ್ರಕಾರ ಪ್ರಾಥಮಿಕ ತನಿಖೆಗೆ ಅವಕಾಶವಿದ್ದರೂ, ಕಿಂಚಿತ್ತೂ ತನಿಖೆ ನಡೆಸದೆ, ಗೃಹ ಸಚಿವರು ಸೂಚಿಸಿದರೆಂದು ನಮ್ಮ ಪಕ್ಷದ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ತುರ್ತಾಗಿ ಕ್ರಮ ಕೈಗೊಳ್ಳಲಾಗಿದೆ. ಮಹಿಳಾ ಪೊಲೀಸರನ್ನು ಮುಂದಿಟ್ಟುಕೊಂಡು ದೂರು ದಾಖಲಿಸಿ ಕಾನೂನು ದುರುಪಯೋಗ ಮಾಡಿಕೊಳ್ಳಲಾಗಿದೆ. ಹಾಗಾಗಿ ನಮ್ಮ ಪಕ್ಷದ ಮುಖಂಡರ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕೆಆರ್‌ಎಸ್ ಪಕ್ಷದ ರಾಜ್ಯ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಮಹೇಶ್ ನಗರಂಗೆರೆ, ಸ್ಥಳೀಯ ಪದಾಧಿಕಾರಿಗಳಾದ ಮಾರುತಿ ಸಿ.ಎನ್., ರಾಜ್ಯ ಕಾರ್ಯದರ್ಶಿ ಬಾಲರಾಜ್ ಎಸ್.ಎನ್. ದೇವರಹಳ್ಳಿ, ಚಳ್ಳಕೆರೆ ತಾಲೂಕು ಉಪಾಧ್ಯಕ್ಷ ಜಬೀವುಲ್ಲಾ, ಹೊಸದುರ್ಗ ತಾಲೂಕು ಅಧ್ಯಕ್ಷ ಕೆಂಚಪ್ಪ ನಾಯಕ, ಹೊಳಲ್ಕೆರೆ ಪ್ರಧಾನ ಕಾರ್ಯದರ್ಶಿ ಆನಂದ್, ಪುಟ್ಟಮ್ಮ ಹಿರಿಯೂರು ಚಿತ್ರದುರ್ಗಾ ತಾಲೂಕು ಪದಾಧಿಕಾರಿಗಳಾದ ನಾಗರಾಜ್, ತಿಮ್ಮರಾಜು, ಅಲ್ಲಾಬಕಾಷ್, ಕೆಂಚಪ್ಪ, ತಿಪ್ಪೇಸ್ವಾಮಿ ಮತ್ತಿತರರು ಹಾಜರಿದ್ದರು.



