May 14, 2026
Thursday, May 14, 2026
spot_img

ಮಧ್ಯಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಮೂವರು ಕಾರ್ಮಿಕರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ಸಂಭವಿಸಿದ ಭಾರೀ ಸ್ಫೋಟ ಜನರಲ್ಲಿ ಆತಂಕ ಸೃಷ್ಟಿಸಿದೆ.

ಟೋಂಕ್ ಕಲಾನ್ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಿಗ್ಗೆ ಏಕಾಏಕಿ ಸ್ಫೋಟ ಸಂಭವಿಸಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ.

ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಸುತ್ತಮುತ್ತ ಭಾರಿ ಹೊಗೆ ಆವರಿಸಿತ್ತು. ದೇಹದ ಅವಶೇಷಗಳು 20ರಿಂದ 25 ಅಡಿ ದೂರದವರೆಗೆ ಚಿಮ್ಮಿಬಿದ್ದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಗಾಯಗೊಂಡವರಲ್ಲಿ ಅನೇಕರು ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದು, ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:

ಸ್ಫೋಟ ಸಂಭವಿಸಿದ ವೇಳೆ ಕಾರ್ಖಾನೆಯೊಳಗೆ ಸುಮಾರು 15ರಿಂದ 25 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಾರ್ಖಾನೆಯಲ್ಲಿ ಒಟ್ಟು 200ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಸ್ಫೋಟಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಘಟನೆ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸುರಕ್ಷತಾ ನಿಯಮ ಪಾಲನೆಯ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !