ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು-ಕಾಶ್ಮೀರದಲ್ಲಿ ಮಾದಕವಸ್ತು ಮತ್ತು ಭಯೋತ್ಪಾದನಾ ಜಾಲದ ವಿರುದ್ಧ ಪೊಲೀಸರು ಭಾರೀ ಕಾರ್ಯಾಚರಣೆ ನಡೆಸಿದ್ದು, ಕಳೆದ ಒಂದು ತಿಂಗಳಲ್ಲಿ ನೂರಾರು ಆರೋಪಿಗಳನ್ನು ಬಂಧಿಸಲಾಗಿದೆ.
“ನಶೆ ಮುಕ್ತ ಜಮ್ಮು-ಕಾಶ್ಮೀರ” ಅಭಿಯಾನದ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ವಿವಿಧ ಭಾಗಗಳಲ್ಲಿ ನಡೆದ ದಾಳಿಗಳಲ್ಲಿ 806 ಆರೋಪಿಗಳನ್ನು ಬಂಧಿಸಲಾಗಿದ್ದು, 667 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ ಸಾವಿರಾರು ಸೈಕೋಟ್ರೋಪಿಕ್ ಮಾತ್ರೆಗಳನ್ನೂ ಪೊಲೀಸರು ಸೀಜ್ ಮಾಡಿದ್ದಾರೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಏಳು ಪಟ್ಟು ಹೆಚ್ಚಾಗಿದೆ ಎಂದು ಡಿಜಿಪಿ ನಳಿನ್ ಪ್ರಭಾತ್ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:
ಕಾರ್ಯಾಚರಣೆಯ ವೇಳೆ 41.85 ಕೋಟಿ ರೂ. ಮೌಲ್ಯದ 97 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇದಲ್ಲದೆ ಸುಮಾರು 15 ಕೋಟಿ ರೂ. ಮೌಲ್ಯದ 41 ಅಕ್ರಮ ಆಸ್ತಿಗಳನ್ನು ನೆಲಸಮ ಮಾಡಲಾಗಿದೆ. ಮಾದಕವಸ್ತು ಕಳ್ಳಸಾಗಣೆ ಜಾಲದ ಆರ್ಥಿಕ ಮೂಲವನ್ನೇ ಹೊಡೆದುರುಳಿಸುವುದು ಈಗ ಪ್ರಮುಖ ಗುರಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತರಲ್ಲಿ ಹಲವು ಗಂಭೀರ ಪ್ರಕರಣಗಳಲ್ಲಿ ಬೇಕಾಗಿದ್ದ ಕುಖ್ಯಾತ ಆರೋಪಿಗಳೂ ಸೇರಿದ್ದಾರೆ. ರಾಜ್ಯದಲ್ಲಿ ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ನಿಗ್ರಹಿಸಲು ಮುಂದಿನ ದಿನಗಳಲ್ಲೂ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.



