May 15, 2026
Friday, May 15, 2026
spot_img

ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಸುಗಮವಾಗಿ ನಡೆಸಬೇಕು: ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

ಹೊಸದಿಗಂತ ವರದಿ ಚಿತ್ರದುರ್ಗ:

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಇದೇ ಮೇ 18 ರಿಂದ 23 ರವರೆಗೆ ಜಿಲ್ಲೆಯ 16 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮವಾಗಿ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‌ಎಸ್‌ಎಲ್‌ಸಿ ವಾರ್ಷಿಕ-1ನ್ನು ಜಿಲ್ಲೆಯಲ್ಲಿ ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ನಡೆಸಲಾಗಿದ್ದು, ಅದರಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಅನ್ನೂ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಜವಾಬ್ದಾರಿಯುತವಾಗಿ ಪರೀಕ್ಷಾ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು, ಸ್ವಚ್ಛವಾದ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಕ್ರಮ ನಡೆಯದಂತೆ ತಡೆಯಲು ಜಿಲ್ಲಾಮಟ್ಟದ ಅಧಿಕಾರಿಗಳನ್ನು ವಿಚಕ್ಷಣಾ ಜಾಗೃತಿದಳವನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಇದೇ ಮೇ 18 ರಿಂದ 23 ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ 16 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಚಳ್ಳಕೆರೆ ತಾಲ್ಲೂಕಿನಲ್ಲಿ 748 ವಿದ್ಯಾರ್ಥಿಗಳು, ಚಿತ್ರದುರ್ಗ-1494, ಹಿರಿಯೂರು-688, ಹೊಳಲ್ಕೆರೆ-445, ಹೊಸದುರ್ಗ-726, ಮೊಳಕಾಲ್ಮುರು-323 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 4424 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:

ಪರೀಕ್ಷೆಯ ಪಾವಿತ್ರತೆ ಕಾಪಾಡಲು ಜಿಲ್ಲಾ ಪಂಚಾಯತ್‌ನಲ್ಲಿ ಕೇಂದ್ರಿಕೃತ ವೀಕ್ಷಣಾ ಘಟಕ ಸ್ಥಾಪಿಸಿದ್ದು, ಅಧಿಕಾರಿ, ಸಿಬ್ಬಂದಿಗಳನ್ನೊಳಗೊಂಡ ನೋಡಲ್ ಅಧಿಕಾರಿಗಳು ಮತ್ತು ವೀಕ್ಷಕರ ತಂಡ ರಚಿಸಲಾಗುವುದು. ಜಿಲ್ಲೆಯಲ್ಲಿ ಸೂಕ್ಷ್ಮ, ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳು ಯಾವುದೂ ಇರುವುದಿಲ್ಲ. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪ್ರಥಮ ಚಿಕಿತ್ಸಾ ಪೆಟ್ಟಿಗೆಯೊಂದಿಗೆ ಆರೋಗ್ಯ ಇಲಾಖೆ ಸಿಬ್ಬಂದಿಯವರು ಹಾಗೂ ಪೊಲೀಸ್ ಸಿಬ್ಬಂದಿಯನ್ನು ಪರೀಕ್ಷೆ ನಡೆಯುವ ದಿನಗಳಂದು ನಿಯೋಜಿಸಬೇಕು ಎಂದರು.

ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಹಾಗೂ ಪರೀಕ್ಷಾ ಸುರಕ್ಷತಾ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಗೊಳಪಟ್ಟಂತೆ ನಿಷೇಧಾಜ್ಞೆ ಜಾರಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳನ್ನು ಕೋರಿದರು.

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ : ಮೇ 18 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಪ್ರಥಮ ಭಾಷೆ, ಮೇ 19ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ವಿಜ್ಞಾನ, ಮೇ 20ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ದ್ವಿತೀಯ ಭಾಷೆ, ಮೇ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಗಣಿತ, ಮೇ 22ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ತೃತೀಯ ಭಾಷೆ, ಬೆಳಿಗ್ಗೆ 10 ರಿಂದ ಮಧ್ಯಾಹ್ನ 12.15 ರವರೆಗೆ ಎನ್.ಎಸ್.ಕ್ಯೂ.ಎಫ್, ಮೇ 23ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15 ರವರೆಗೆ ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಸಭೆಯಲ್ಲಿ ಡಯಟ್ ಪ್ರಾಂಶುಪಾಲ ಎಂ.ನಾಸಿರುದ್ದೀನ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕಚೇರಿ ಶಿಕ್ಷಣಾಧಿಕಾರಿ ಮಹಮದ್ ಇನಾಯತ್ ಉಲ್ಲಾ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್.ಸುರೇಶ್, ಹೆಚ್.ಗಿರಿಜಾ, ಶ್ರೀನಿವಾಸ, ಸೈಯದ್ ಮೋಸಿನ್, ನಿರ್ಮಲಾ ದೇವಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !