ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿಜಯನಗರ ಜಿಲ್ಲೆಯ ಹೊಸಪೇಟೆ ಸಮೀಪದ ಟಿಬಿ ಡ್ಯಾಂ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಹುಲಿಗಿ ಜಾತ್ರೆಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಹಿಂಬದಿಗೆ ಕ್ಯಾಂಟರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಒಂದು ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು. ಗಾಯಾಳುಗಳನ್ನ ಹೊಸಪೇಟೆ ಹಾಗೂ ಕೊಪ್ಪಳ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ .
ಇನ್ನು ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕೊಪ್ಪಳದ ಹುಲಿಗೆಮ್ಮ ದೇವಾಲಯಕ್ಕೆ ಭಕ್ತಾದಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ ಒಂದು ತುಂಗಭದ್ರಾ ಸೇತುವೆಯ ಮೇಲಿಂದ ಕೆಳಗೆಬಿದ್ದ ಪರಿಣಾಮ ಚಿಕ್ಕ ಮಕ್ಕಳು ಸೇರಿದಂತೆ ಆರು ಮಂದಿ ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆ ಕುರಿತು ಸಂಸದರಾದ ತುಕಾರಾಂ ಅವರೊಂದಿಗೆ ಮಾತನಾಡಿ, ಮಾಹಿತಿ ಪಡೆದುಕೊಂಡಿದ್ದೇನೆ. ಮೃತರೆಲ್ಲರೂ ಬಡ ಕುಟುಂಬಕ್ಕೆ ಸೇರಿದವರು. ಮಾನವೀಯ ನೆಲೆಯಲ್ಲಿ ಮೃತರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.



