ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮುಂದಿನ ಮೂರ್ನಾಲ್ಕು ದಿನ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಮಳೆ ಇದಾಗಿದ್ದು, ಜನರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಉತ್ತಮವಾಗಿದೆ.
ಹಗಲಿನಲ್ಲಿ ಮಳೆಯ ಸುಳಿವೇ ಇಲ್ಲದಿರಬಹುದು, ಆದರೆ ಸಂಜೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿ, ನಂತರ ಜೋರು ಮಳೆ ಸುರಿಯುತ್ತದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ, ತುಮಕೂರು, ಮಂಡ್ಯ, ರಾಮನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇನ್ನು ರಾಯಚೂರು, ಯಾದಗಿರಿ, ವಿಜಯಪುರ, ಕಲಬುರಗಿ, ಗದಗ, ಕೊಪ್ಪಳ ಹಾಗೂ ಬಾಗಲಕೋಟೆಯಲ್ಲಿ ಆಲಿಕಲ್ಲು ಸಹಿತ ಬಿರುಗಾಳಿ ಮಳೆ ಬೀಳಲಿದೆ.



