May 16, 2026
Saturday, May 16, 2026
spot_img

ನೀಟ್-ಯುಜಿ 2026 ಅಕ್ರಮ: ನಿಷ್ಪಕ್ಷಪಾತ ತನಿಖೆಗೆ ABVP ಆಗ್ರಹ

ಹೊಸದಿಗಂತ ವರದಿ ಬೀದರ್:

ನೀಟ್-ಯುಜಿ 2026 ಪರೀಕ್ಷೆಯಲ್ಲಿ ನಡೆದಿರುವ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ವಿವಿಧ ಪರೀಕ್ಷಾ ಅಕ್ರಮ ಪ್ರಕರಣಗಳ ಕುರಿತು ಕೇಂದ್ರ ಸರ್ಕಾರವು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಮತ್ತು ಪರೀಕ್ಷಾ ಅಕ್ರಮ ವಿರೋಧಿ ವಿಶೇಷ ಕಠಿಣ ಕಾಯ್ದೆ ಜಾರಿಗೆ ತರಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಇಂದು ಭಾಲ್ಕಿಯಲ್ಲಿ ಪ್ರತಿಭಟನೆ ಮೂಲಕ (ಎಬಿವಿಪಿ) ಆಗ್ರಹಿಸಿದ್ದಾರೆ.

ಈ ಸಂಬಂಧ ಭಾಲ್ಕಿ ತಹಸಿಲ್ದಾರ ಅವರ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದ ಎಬಿವಿಪಿ ಕಾರ್ಯಕರ್ತರು, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಿಸಿದ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳ ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಯನ್ನು ಕಾಪಾಡುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಸಂಚಾಲಕ ನಾಗರಾಜ ಸುಲ್ತಾನಪುರೆ ಮಾತನಾಡಿ, ನೀಟ್-ಯುಜಿ 2026 ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳ ಕುರಿತು ವಿವಿಧ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿರುವುದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದರು.

ವರ್ಷಗಳ ಕಾಲ ಪರಿಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಇಂತಹ ಅಕ್ರಮಗಳು ದೊಡ್ಡ ಅನ್ಯಾಯವಾಗಿದ್ದು, ಪ್ರಕರಣದ ಕುರಿತು ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ಸಮಗ್ರ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟಲು ವಿಶೇಷ ಕಠಿಣ ಕಾನೂನು ಜಾರಿಗೆ ತರಬೇಕೆಂದು ಆಗ್ರಹಿಸಿದ ಅವರು, ನೀಟ್ ಅಕ್ರಮದಲ್ಲಿ ಭಾಗಿಯಾದವರಿಗೆ ಜೀವಾವಧಿ ಶಿಕ್ಷೆ ಅಥವಾ ದೀರ್ಘಾವಧಿಯ ಕಠಿಣ ಶಿಕ್ಷೆ ವಿಧಿಸುವಂತಹ ಕಾನೂನು ವ್ಯವಸ್ಥೆ ರೂಪಿಸಬೇಕು ಎಂದು ಹೇಳಿದರು. ಪ್ರಶ್ನೆಪತ್ರಿಕೆ ಸೋರಿಕೆಯನ್ನು “ರಾಷ್ಟ್ರದ ಭವಿಷ್ಯದ ವಿರುದ್ಧದ ಅಪರಾಧ” ಎಂದು ಘೋಷಿಸಿ, “ಒಬ್ಬ ವಿದ್ಯಾರ್ಥಿಯ ಕನಸು ಹಾಳು ಮಾಡಿದರೆ — ದೇಶದ ಭವಿಷ್ಯ ಹಾಳು ಮಾಡಿದಂತೆಯೇ” ಎಂಬ ತತ್ವದಡಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:

ಇದಲ್ಲದೆ, ನಿಗದಿತ ಅವಧಿಯೊಳಗೆ ತನಿಖೆ ಪೂರ್ಣಗೊಳಿಸಿ, ಪರೀಕ್ಷಾ ಮಾಫಿಯಾ ಸೇರಿದಂತೆ ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ತನಿಖೆ ಪೂರ್ಣಗೊಳ್ಳುವವರೆಗೆ ಸಂಪೂರ್ಣ ಪಾರದರ್ಶಕತೆ ಕಾಪಾಡಿಕೊಂಡು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವಾಸ್ತವಾಂಶಗಳನ್ನು ಬಹಿರಂಗಪಡಿಸಬೇಕು ಎಂದು ಹೇಳಿದರು.

ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ತಾಂತ್ರಿಕ ಭದ್ರತೆ, ಪ್ರಶ್ನೆಪತ್ರಿಕೆಯ ಗೌಪ್ಯತೆ ಹಾಗೂ ಪರೀಕ್ಷಾ ಕೇಂದ್ರಗಳ ಮೇಲ್ವಿಚಾರಣೆಯನ್ನು ಇನ್ನಷ್ಟು ಬಲಪಡಿಸಬೇಕೆಂದು ಎಬಿವಿಪಿ ಒತ್ತಾಯಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ನಾಗರಾಜ ಸುಲ್ತಾನಪುರೆ, ನಗರ ಕಾರ್ಯದರ್ಶಿಗಳು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !