ಹೊಸ ದಿಗಂತ ಡಿಜಿಟಲ್ ಡೆಸ್ಕ್:
ನೀಟ್ -ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ರಾಷ್ಟ್ರ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕೇಂದ್ರ ಸರಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸುತ್ತಿದೆ.
ಈ ಕುರಿತು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೂಡ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಂದೇಶ ಹಂಚಿಕೊಳ್ಳುವ ಮೂಲಕ ಆಕ್ರೋಶ ಹೊರಹಾಕಿದ್ದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ವಜಾಕ್ಕೆ ಆಗ್ರಹಿಸಿದ್ದಾರೆ.
ಪರೀಕ್ಷೆಯ ಎರಡು ದಿನ ಮುನ್ನವೇ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಇಡೀ ದೇಶಕ್ಕೆ ತಿಳಿದಿದೆ. ಆದರೆ ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮೌನಕ್ಕೆ ಶರಣಾಗಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ದೇಶದ ಶಿಕ್ಷಣ ವ್ಯವಸ್ಥೆಯ ಆಧಾರಸ್ತಂಭವನ್ನೇ ನಾಶಗೊಳಿಸಿದ್ದಾರೆ. ಇದರಿಂದ 22 ಲಕ್ಷ ಯುವಕರಿಗೆ ಕೇಂದ್ರ ಸರ್ಕಾರ ದ್ರೋಹ ಎಸಗಿದೆ ಎಂದು ಟೀಕಿಸಿದರು.
ಕೇಂದ್ರ ಸರಕಾರವು ವಿಶ್ವವಿದ್ಯಾಲಯಗಳಲ್ಲಿ ತಮಗೆ ಬೇಕಾದವರನ್ನು ನೇಮಕ ಮಾಡಿಕೊಂಡು ಹಣ ಮಾಡುತ್ತಿದೆ. ಕಳೆದ ಕೆಲವು ವರ್ಷಗಳಲ್ಲಿ ಕನಿಷ್ಠ 80 ಕ್ಕೂ ಹೆಚ್ಚು ಬಾರಿ ವಿವಿಧ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿವೆ. ಈ ಎಲ್ಲದಕ್ಕೂ ತೆರೆ ಎಳೆಯಬೇಕಾದರೆ ಶಿಕ್ಷಣ ಸಚಿವರನ್ನು ಮನೆಗೆ ಕಳುಹಿಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.



