ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಬಸ್‌ನ ಟೈರ್ ಸ್ಫೋಟಗೊಂಡ ಪರಿಣಾಮ ವಾಹನ ಕ್ಷಣಾರ್ಧದಲ್ಲಿ ಬೆಂಕಿಗಾಹುತಿಯಾಗಿದೆ.
ಹಾಸನ ತಾಲೂಕಿನ ಶಾಂತಿಗ್ರಾಮ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಯಾಣಿಕರ ಪ್ರಕಾರ, ಬಸ್ ವೇಗವಾಗಿ ಸಂಚರಿಸುತ್ತಿದ್ದ ವೇಳೆ ಏಕಾಏಕಿ ದೊಡ್ಡ ಸದ್ದು ಕೇಳಿಬಂದಿದೆ. ಬಳಿಕ ಟೈರ್ ಸ್ಫೋಟಗೊಂಡು ಹೊಗೆ ಕಾಣಿಸಿಕೊಂಡಿದ್ದು, ತಕ್ಷಣ ಚಾಲಕ ಬಸ್‌ನ್ನು ರಸ್ತೆಯ ಬದಿಗೆ ನಿಲ್ಲಿಸಿದ್ದಾರೆ. ಪರಿಸ್ಥಿತಿಯ ಗಂಭೀರತೆ ಅರಿತ ಪ್ರಯಾಣಿಕರು ಆತಂಕದಲ್ಲಿ ಕೆಳಗಿಳಿದ ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದೆ.
ಇದನ್ನೂ ಓದಿ:
ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿ ಒಟ್ಟು 36 ಮಂದಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಎಲ್ಲರೂ ಸುರಕ್ಷಿತವಾಗಿ ಹೊರಬಂದಿದ್ದರೂ, ಹಲವರ ಮೊಬೈಲ್‌ಗಳು, ಬ್ಯಾಗ್‌ಗಳು ಹಾಗೂ ಇತರೆ ಲಗೇಜ್ ಬೆಂಕಿಯಲ್ಲಿ ಸುಟ್ಟು ಹೋಗಿವೆ.
ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಆದರೆ ಅಷ್ಟರಲ್ಲೇ ಬಸ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಶಾಂತಿಗ್ರಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.



