October 14, 2026
Wednesday, October 14, 2026
spot_img

WEATHER | ಮುಂದಿನ 3 ದಿನ ಕರಾವಳಿ, ಮಲೆನಾಡಿನಲ್ಲಿ ಮಳೆರಾಯನ ಅಬ್ಬರ: ಹೈ ಅಲರ್ಟ್ ಘೋಷಣೆ

ಕರ್ನಾಟಕದಾದ್ಯಂತ ಮುಂಗಾರು ಚುರುಕಾಗಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಲವಾದ ಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಮುಖವಾಗಿ ಪಶ್ಚಿಮ ಘಟ್ಟಗಳು ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಿಗೂ ಅಲರ್ಟ್ ಘೋಷಿಸಲಾಗಿದೆ.

ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ

ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಜೋರಾಗಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮಳೆಯೊಂದಿಗೆ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮತ್ತು ಸಿಡಿಲಿನ ಮುನ್ನೆಚ್ಚರಿಕೆ ಇರುವುದರಿಂದ ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಕೊಡಗು, ಹಾಸನ, ಶಿವಮೊಗ್ಗ, ಮೈಸೂರು, ಚಾಮರಾಜನಗರ ಹಾಗೂ ಚಿಕ್ಕಮಗಳೂರಿನ ಹಲವೆಡೆ ಜೂನ್ 19ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Must Read