ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ 2026ರ 61ನೇ ರೋಚಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ. ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದು, ಆರ್‌ಸಿಬಿ ಮೊದಲು ಬ್ಯಾಟಿಂಗ್ ನಡೆಸಲಿದೆ. ಆದರೆ, ಈ ಮಹತ್ವದ ಪಂದ್ಯಕ್ಕೆ ಮುನ್ನ ಆರ್‌ಸಿಬಿ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದ್ದು, ಗಾಯದ ಸಮಸ್ಯೆಯಿಂದಾಗಿ ರೆಗ್ಯುಲರ್ ಕ್ಯಾಪ್ಟನ್ ರಜತ್ ಪಾಟಿದಾರ್ ಆಡುವ ಬಳಗದಿಂದ ಹೊರಗುಳಿದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಕಳೆದ ಐಪಿಎಲ್ ಆವೃತ್ತಿಯ ಫೈನಲ್‌ನಲ್ಲಿ ಮುಖಾಮುಖಿಯಾಗಿದ್ದ ಈ ಎರಡು ಬಲಿಷ್ಠ ತಂಡಗಳು, ಆ ಐತಿಹಾಸಿಕ ಪಂದ್ಯದ ಬಳಿಕ ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿವೆ. ಪ್ರಸ್ತುತ ಪಾಯಿಂಟ್ಸ್ ಟೇಬಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ ನಾಲ್ಕನೇ ಸ್ಥಾನದಲ್ಲಿದೆ.
ಈ ಪಂದ್ಯವು ಉಭಯ ತಂಡಗಳಿಗೂ ಅತ್ಯಂತ ನಿರ್ಣಾಯಕವಾಗಿದೆ. ಆರ್‌ಸಿಬಿ ಈ ಪಂದ್ಯವನ್ನು ಗೆದ್ದು ಪ್ಲೇಆಫ್ ಸ್ಥಾನವನ್ನು ಅಧಿಕೃತವಾಗಿ ಖಚಿತಪಡಿಸಿಕೊಳ್ಳುವ ತವಕದಲ್ಲಿದ್ದರೆ, ಅತ್ತ ಪಂಜಾಬ್ ಕಿಂಗ್ಸ್ ಕಳೆದ ಫೈನಲ್ ಸೋಲಿಗೆ ಸೇಡು ತೀರಿಸಿಕೊಳ್ಳುವುದರ ಜೊತೆಗೆ ಪ್ಲೇಆಫ್ ರೇಸ್‌ನಲ್ಲಿ ಜೀವಂತವಾಗಿರಲು ಹೋರಾಟ ನಡೆಸುತ್ತಿದೆ.



