October 14, 2026
Wednesday, October 14, 2026
spot_img

WEATHER | ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ: ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವರುಣನ ಆರ್ಭಟ ಜೋರಾಗಿರಲಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಮತ್ತು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಇದರೊಂದಿಗೆ ಆಲಿಕಲ್ಲು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಲ್ಲಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

ಇನ್ನೊಂದೆಡೆ, ದಕ್ಷಿಣ ಒಳನಾಡಿನ ದಾವಣಗೆರೆ, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಹಾಗೂ ಆಲಿಕಲ್ಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಿಗೂ ಸಹ ಆರೆಂಜ್ ಅಲರ್ಟ್ ನೀಡಲಾಗಿದ್ದು, ಸಾರ್ವಜನಿಕರು ಜಾಗರೂಕರಾಗಿರಲು ಕೋರಲಾಗಿದೆ.

ಬಿರುಗಾಳಿ ಮತ್ತು ಆಲಿಕಲ್ಲು ಮಳೆ ಬರುವಾಗ ಸಾರ್ವಜನಿಕರು ಮರಗಳ ಕೆಳಗೆ ನಿಲ್ಲದೆ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಬೇಕು. ವಿಶೇಷವಾಗಿ ರೈತರು ಹಾಗೂ ಜಾನುವಾರು ಸಾಕಣೆದಾರರು ಹವಾಮಾನ ವೈಪರೀತ್ಯದ ಬಗ್ಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Must Read