ಹೊಸದಿಗಂತ ವರದಿ ಕಲಬುರಗಿ:
ಜಿಲ್ಲೆಯ ಆಳಂದಿನ ವಿವಾದಿತ ಲಾಡ್ಲೇ ಮಶಾಕ್ ದರ್ಗಾ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೈಗೊಂಡಿರುವ ಮಹತ್ವದ ನಿರ್ಧಾರ ಈಗ ತೀವ್ರ ರಾಜಕೀಯ ಹಾಗೂ ಸಾಮಾಜಿಕ ಸಂಘರ್ಷಕ್ಕೆ ಕಾರಣವಾಗಿದ್ದು,ಗಲಾಟೆ ಪ್ರಕರಣದಲ್ಲಿದ್ದ ಪ್ರಮುಖ ಕೇಸ್‌ಗಳನ್ನು ಸರ್ಕಾರ ವಾಪಸ್ ಪಡೆದಿರುವುದನ್ನು ಖಂಡಿಸಿ ಇಂದು (ಸೋಮವಾರ) ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಹೋರಾಟ ನಡೆಸಲು ಹಿಂದೂ ಸಂಘಟನೆಗಳು ಸಜ್ಜಾಗಿವೆ.
ಶಿವಸೇನೆ ಪಕ್ಷದ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ಈ ಬೃಹತ್ ಪ್ರತಿಭಟನೆ ನಡೆಯಲಿದ್ದು, ಸರ್ಕಾರದ ವಿರುದ್ಧ ಹಿಂದೂ ಕಾರ್ಯಕರ್ತರು ಕೆರಳಿ ಕೆಂಡವಾಗಿದ್ದಾರೆ.
ಹಿನ್ನೆಲೆ ಏನು?
ಕಳೆದ 2022ರ ಮಾರ್ಚ್ 1ರಂದು ಆಳಂದದ ಲಾಡ್ಲೇ ಮಶಾಕ್ ದರ್ಗಾ ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗದ ಪೂಜೆಗೆ ಹಿಂದೂ ಸಂಘಟನೆಗಳು ಕರೆ ನೀಡಿದ್ದವು. ಈ ವೇಳೆ ಎರಡು ಕೋಮುಗಳ ನಡುವೆ ತೀವ್ರ ಘರ್ಷಣೆ ನಡೆದು, ಕಲ್ಲು ತೂರಾಟ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿತ್ತು. ಈ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿದ್ದವು.
ಸರ್ಕಾರದ ನಡೆಗೆ ಆಕ್ರೋಶ
ಘಟನೆ ನಡೆದು ಕೇವಲ ನಾಲ್ಕು ವರ್ಷಗಳಾಗುವಷ್ಟರಲ್ಲಿ, ಪ್ರಕರಣದಲ್ಲಿದ್ದ ಸುಮಾರು 8 ಪ್ರಮುಖ ಕೇಸ್‌ಗಳನ್ನು ವಾಪಸ್ ಪಡೆಯಲು ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಆದೇಶ ಹೊರಡಿಸಿತ್ತು. ಸರ್ಕಾರದ ಈ ನಡೆ ಏಕಪಕ್ಷೀಯವಾಗಿದ್ದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದವರನ್ನು ರಕ್ಷಿಸುತ್ತಿದೆ ಎಂದು ಹಿಂದೂ ಪರ ಸಂಘಟನೆಗಳು ಗಂಭೀರವಾಗಿ ಆರೋಪಿಸಿವೆ.
ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣದ ಹಿನ್ನೆಲೆಯಲ್ಲಿ ಈ ಕೇಸ್‌ಗಳನ್ನು ಹಿಂಪಡೆಯಲಾಗಿದೆ. ಇದನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಸಿದ್ದಲಿಂಗ ಸ್ವಾಮೀಜಿ ಆಕ್ರೋಶ ಹೊರಹಾಕಿದ್ದಾರೆ. ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ನೂರಾರು ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಜಮಾಯಿಸಲಿದ್ದು, ಸರ್ಕಾರದ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ಬೃಹತ್ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.



