August 21, 2026
Friday, August 21, 2026
spot_img

ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಆರು ಪ್ರಯಾಣಿಕರ ದುರ್ಮ*ರಣ, 21 ಜನರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ಮಂಗಳವಾರ ಮುಂಜಾನೆ ಡಬಲ್ ಡೆಕ್ಕರ್ ಎಸಿ ಬಸ್ ಪಲ್ಟಿಯಾದ ಪರಿಣಾಮ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿದ್ದಾರೆ.

ದೆಹಲಿಯಿಂದ ಬಿಹಾರಕ್ಕೆ ಸುಮಾರು 50 ಪ್ರಯಾಣಿಕರೊಂದಿಗೆ ಚಲಿಸುತ್ತಿದ್ದ ಬಸ್, ಇಂದು ಮುಂಜಾನೆ 5.15 ರ ಸುಮಾರಿಗೆ ನಿಭಾ ಖೇಡಾ ಗ್ರಾಮದ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಚಾಲಕನಿಗೆ ನಿದ್ದೆಯ ಮಂಪರು ಆವರಿಸಿದ್ದರಿಂದ ಆತ ವಾಹನದ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ ಎನ್ನಲಾಗಿದೆ.

ಬಸ್ ಅತಿ ವೇಗವಾಗಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ವಾಹನವು ರಸ್ತೆ ಬದಿಯ ರೇಲಿಂಗ್‌ಗೆ ಸಿಲುಕಿಕೊಂಡಿದ್ದು, ಹಲವು ಪ್ರಯಾಣಿಕರು ಕಿಟಕಿಗಳ ಮೂಲಕ ಹೊರಗೆ ಬಿದ್ದಿದ್ದಾರೆ. ಅಪಘಾತದ ಬೆನ್ನಲ್ಲೇ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಸದ್ಯ ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ಮೂವರು ಪೊಲೀಸ್ ಸಿಬ್ಬಂದಿ ಸೇರಿದಂತೆ ಗಂಭೀರವಾಗಿ ಗಾಯಗೊಂಡಿರುವ ಪ್ರಯಾಣಿಕರನ್ನು ಲಕ್ನೋದ ಟ್ರಾಮಾ ಸೆಂಟರ್‌ಗೆ ರವಾನಿಸಲಾಗಿದ್ದು, ಇತರರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !