May 26, 2026
Tuesday, May 26, 2026
spot_img

ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಸಿಎಂ ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ಜೋರಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹಿತ ಸಚಿವರ ದಂಡು ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ನಲ್ಲಿ ಸಭೆ ಮೇಲೆ ಸಭೆಯನ್ನು ನಡೆಸುತ್ತಿದ್ದಾರೆ.

ರಾಜ್ಯಸಭೆಯ ಆಫರ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸರಣಿ ಚರ್ಚೆ ನಡೆಸುತ್ತಿದ್ದಾರೆ. ಈ ವೇಳೆ ಸಿದ್ದರಾಮಯ್ಯ ಅವರಿಗೆ ರಾಜ್ಯಸಭೆಯ ಆಫರ್ ನೀಡಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಆದರೆ ಹೈಕಮಾಂಡ್‌ನ ಈ ಆಫರ್ ಕುರಿತು ಸಿದ್ದರಾಮಯ್ಯ ಅವರು ಸದ್ಯಕ್ಕೆ ಯಾವುದೇ ನಿರ್ಧಾರವನ್ನು ಪ್ರಕಟಿಸದೆ ಮೌನಕ್ಕೆ ಶರಣಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದೆ.

ಸಿದ್ದರಾಮಯ್ಯ ಮುಂದೆ ರಾಜ್ಯಸಭೆ ಮಾತ್ರವಲ್ಲದೇ ಪುತ್ರ ಯತೀಂದ್ರ ಅವರನ್ನು ಉಪಮುಖ್ಯಮಂತ್ರಿ ಮಾಡುವುದಾಗಿಯೂ ಸಹ ರಾಹುಲ್ ಗಾಂಧಿ ಆಫರ್ ನೀಡಿದ್ದಾರೆ ಎಂದು ಸುದ್ದಿ ವರದಿಯಾಗುತ್ತಿದೆ. ಆದ್ರೆ, ಸಿಎಂ ಸಿದ್ದರಾಮಯ್ಯ ಮಾತ್ರ ರಾಹುಲ್ ಗಾಂಧಿ ಆಫರ್​​ಗಳಿಗೆ ಸ್ಪಷ್ಟ ನಿರ್ಧಾರವನ್ನು ನೀಡದೆ ಎಲ್ಲವನ್ನೂ ಸೂಕ್ಷ್ಮವಾಗಿ ಆಲಿಸಿದ್ದಾರೆ.

ಮುಂದಿನ ಕರ್ನಾಟಕದ ಸಿಎಂ ಯಾರು?

ಇದೇ ವೇಳೆ ಸಭೆಯಲ್ಲಿ ಹೈಕಮಾಂಡ್ ನಾಯಕರ ಮುಂದೆ ಸಿಎಂ ಸಿದ್ದರಾಮಯ್ಯ ಅವರು ನೇರ ಪ್ರಶ್ನೆಯೊಂದನ್ನು ಇಟ್ಟಿದ್ದಾರೆ ಎನ್ನಲಾಗುತ್ತಿದ್ದು, ನಾನು ರಾಜ್ಯಸಭೆಗೆ ಹೋದರೆ, ಮುಂದಿನ ಕರ್ನಾಟಕದ ಸಿಎಂ ಯಾರು? ಎಂದು ಸ ಪ್ರಶ್ನಿಸಿದ್ದಾರೆ. ಈ ವೇಳೆ ಎಐಸಿಸಿ ವರಿಷ್ಠರು, ಹೈಕಮಾಂಡ್ ತೀರ್ಮಾನ ಮಾಡಲಿದೆ. ನಿಮ್ಮನ್ನು ವಿಶ್ವಾಸಕ್ಕೆ ಪಡೆದು ನಿರ್ಧಾರಕೈಗೊಳ್ಳುತ್ತೆ ಎಂದು ಉತ್ತರಿಸಿದ್ದಾರೆ ಎನ್ನಲಾಗಿದೆ.

ರಾಜ್ಯಸಭೆ ಚುನಾವಣೆ ಕುರಿತು ಚರ್ಚೆ

ಇತ್ತ ಕಾಂಗ್ರೆಸ್ ನಾಯಕರು ಮಾತ್ರ ಅಂತಹ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳುತ್ತಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಸಭೆಯಲ್ಲಿ ಕೇವಲ ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗಳ ಬಗ್ಗೆ ಮಾತ್ರ ಚರ್ಚಿಸಲಾಗಿದೆ. ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳು ಸತ್ಯಕ್ಕೆ ದೂರವಾದದ್ದು ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !